ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ರಾಯಚೂರಿನಲ್ಲಿ ಆಯೋಜಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಮ್ಮೇಳನದ ಪೂರ್ವಸಿದ್ಧತೆ, ರೂಪುರೇಷೆ ಹಾಗೂ ಸಂಘಟನಾ ಚಟುವಟಿಕೆಗಳ ಕುರಿತು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರೊಂದಿಗೆ ಗುರುವಾರ ಸಂಘದ ಕಚೇರಿಯಲ್ಲಿ ಚರ್ಚೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಶಿವಾನಂದ ತಗಡೂರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ಅಗತ್ಯ ವಸತಿ, ಸಾರಿಗೆ, ನೋಂದಣಿ, ಊಟೋಪಚಾರ ಸೇರಿದಂತೆ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಮುಂಚಿತವಾಗಿಯೇ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಸಮ್ಮೇಳನದ ವಿವಿಧ ಕಾರ್ಯಕ್ರಮಗಳ ಆಯೋಜನೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಅತಿಥಿಗಳ ಸ್ವಾಗತ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ **ಸ್ಮರಣ ಸಂಚಿಕೆ ಹೊರತರುವ ಸಿದ್ಧತೆ** ಕುರಿತೂ ವಿಚಾರ ವಿನಿಮಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ, ರಾಯಚೂರು ಜಿಲ್ಲಾಧ್ಯಕ್ಷ ಆರ್. ಗುರುನಾಥ, ಸಮಿತಿ ಸದಸ್ಯರಾದ ಪ್ರಸನ್ನ ಕುಮಾರ ಜೈನ್, ಲಕ್ಷ್ಮಣ ಕಪಗಲ್, ಸದಸ್ಯ ಗುರಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.