ಮಾನ್ವಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಯತ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ನಿಜವಾದ ಕ್ರೀಡಾಸ್ಫೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.

ಪಟ್ಟಣದ ಲೋಯೋಲಾ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವದಿಂದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಕೇವಲ ಗೆಲುವಿನ ಉದ್ದೇಶದಿಂದ ಮಾತ್ರವಲ್ಲದೆ, ಸೋಲಿನಿಂದಲೂ ಪಾಠ ಕಲಿತು ಮುಂದಿನ ಸಾಧನೆಗೆ ಸಿದ್ಧರಾಗಬೇಕು. ನಿರಂತರ ಪ್ರಯತ್ನ, ಶಿಸ್ತು ಹಾಗೂ ಆತ್ಮವಿಶ್ವಾಸ ಜೀವನದ ಯಶಸ್ಸಿಗೆ ಪ್ರಮುಖ ಅಂಶಗಳಾಗಿವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ. ಮಾತನಾಡಿ, ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಸಣ್ಣ ರಾಷ್ಟ್ರಗಳ ಕ್ರೀಡಾಪಟುಗಳೂ ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿ ಬಂಗಾರದ ಪದಕಗಳನ್ನು ಪಡೆಯುತ್ತಿದ್ದಾರೆ. ಅಪಾರ ಮಾನವ ಸಂಪನ್ಮೂಲ ಹೊಂದಿರುವ ನಮ್ಮ ದೇಶದಲ್ಲಿ ಇನ್ನಷ್ಟು ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮಬೇಕಾಗಿದೆ ಎಂದರು.

ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡಿದರೆ ರಾಜ್ಯ, ರಾಷ್ಟ್ರ ಹಾಗೂ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸದೃಢತೆ ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ನೆರವಾಗುತ್ತದೆ. ತಾಲೂಕಿನ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಆಶಿಸಿದರು.

ಕ್ರೀಡಾಕೂಟದಲ್ಲಿ ನಿರ್ಣಾಯಕರ ಪಾತ್ರವೂ ಮಹತ್ವದ್ದಾಗಿದ್ದು, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ನ್ಯಾಯಸಮ್ಮತ ಹಾಗೂ ಪಾರದರ್ಶಕ ನಿರ್ಣಯ ಕೈಗೊಳ್ಳಬೇಕು ಎಂದು ತಿಳಿಸಿದರು.

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಕುಂಟೆಪ್ಪ ಗೌರಿಪುರ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನಾಗಮಲ್ಲೇಶ ಜಿ. ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ, ತಾಲೂಕು ಖಾಸಗಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಂಗರಾವು, ನಮ್ಮ ಮಾನ್ವಿ ಕಾಲೇಜಿನ ಅಧ್ಯಕ್ಷ ಮೌನೇಶಗೌಡ ಹೆಚ್., ಲೋಯೋಲಾ ಕಾಲೇಜಿನ ಪ್ರಾಚಾರ್ಯೆ ಶೃತಿ ಖಾಸಿಂ, ಎಸ್.ವಿ.ಪಿ. ಕಲ್ಮಠ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಪಾಟೀಲ್, ಗಾಂಧಿ ಕಾಲೇಜಿನ ಪ್ರಾಚಾರ್ಯ ಡಾ. ಈರಣ್ಣ ಮರ್ಲಟ್ಟಿ, ಮುರಾರ್ಜಿ ಅಲ್ಪಸಂಖ್ಯಾತರ ವಸತಿ ಶಾಲೆಯ ಪ್ರಾಚಾರ್ಯ ವೆಂಕಟೇಶ, ಸರ್ವೋದಯ ಕಾಲೇಜಿನ ಪ್ರಾಚಾರ್ಯೆ ರೇಣುಕಾ, ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಶ್ರೀದೇವಿ, ರವಿಕುಮಾರ, ಶಂಕರ್, ಕೃಷ್ಣವಾಧೂತ, ಉಪನ್ಯಾಸಕ ಅಬ್ದುಲ್ ಹಸನ್ ಸೇರಿದಂತೆ ತಾಲೂಕಿನ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.