ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದೀತಾ ಎಂ.ಎನ್. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರವೂ ಹೈದರಾಬಾದ್ ನಿಜಾಮರ ಆಡಳಿತದಲ್ಲಿದ್ದ ಈ ಭಾಗವು 1948ರ ಸೆಪ್ಟೆಂಬರ್ 17ರಂದು ಭಾರತದೊಂದಿಗೆ ವಿಲೀನಗೊಂಡಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ಜಿಲ್ಲೆಯ ಆರೋಗ್ಯ ಸೇವೆಗಳ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು. ವಿಶ್ವ ರೋಗಿಗಳ ಸುರಕ್ಷತಾ ದಿನದ ಅಂಗವಾಗಿ ಮಾತನಾಡಿದ ಅವರು, ರೋಗಿಗಳ ಆರೈಕೆಯಲ್ಲಿ ಪಾಲಕರು ಹಾಗೂ ಆಸ್ಪತ್ರೆಗಳ ಅರೆ ವೈದ್ಯಕೀಯ ಸಿಬ್ಬಂದಿಗೆ ಔಷಧಿ ಮತ್ತು ವೈದ್ಯಕೀಯ ಪರಿಕರಗಳ ಸಮರ್ಪಕ ಬಳಕೆ ಕುರಿತು ಅಗತ್ಯ ತಾಂತ್ರಿಕ ಕೌಶಲ್ಯ ಹಾಗೂ ಮಾರ್ಗದರ್ಶನವನ್ನು ತಜ್ಞರ ಮೂಲಕ ನಿರಂತರವಾಗಿ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು. ವೈದ್ಯರಿಂದ ಹಿಡಿದು ಸ್ವಚ್ಛತಾ ಸಿಬ್ಬಂದಿವರೆಗೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರುವ ಪ್ರತಿಯೊಬ್ಬ ರೋಗಿಯನ್ನು ಗೌರವದಿಂದ ಕಾಣಬೇಕು ಹಾಗೂ ಸೌಜನ್ಯಯುತವಾಗಿ ಸೇವೆ ನೀಡಬೇಕು. ಕ್ಷೇತ್ರ ಮಟ್ಟದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು. ಸೊಳ್ಳೆಯಿಂದ ಹರಡುವ ಡೆಂಗ್ಯು, ಚಿಕೂನ್ಗುನ್ಯಾ, ಮಲೇರಿಯಾ ಸೇರಿದಂತೆ ಕ್ಷಯರೋಗ, ಕುಷ್ಠರೋಗ, ವಾಂತಿ-ಭೇದಿ ಮೊದಲಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಜೊತೆಗೆ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯವನ್ನು ಸಾರ್ವಜನಿಕರ ಸಹಕಾರದೊಂದಿಗೆ ಪರಿಣಾಮಕಾರಿಯಾಗಿ ಮುಂದುವರಿಸಬೇಕು ಎಂದು ಹೇಳಿದರು. ಎಚ್ಐವಿ ಸೋಂಕಿನ ಕುರಿತು ಸ್ವಯಂ ಅರಿವು ಹಾಗೂ ಪರೀಕ್ಷೆಗೆ ಜನರನ್ನು ಪ್ರೇರೇಪಿಸುವ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಆರೋಗ್ಯ ಜಾಗೃತಿ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳು, ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್ ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ. ಶಿವಕುಮಾರ ನಾರಾ, ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಪುಂಡಲಿಕ ಗಂಜಿ, ಕಚೇರಿ ಅಧೀಕ್ಷಕಿ ಸುಧಾರಾಣಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



