ರಾಯಚೂರು, ಸೆ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಅವರ ದತ್ತಿಯಡಿ ನೀಡಲಾಗುವ ದಿ. ಶ್ರೀಮತಿ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.20ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬಾರಿಯ ದತ್ತಿ ಪ್ರಶಸ್ತಿಗೆ ಬಳ್ಳಾರಿಯ ಕಾದಂಬರಿಕಾರ್ತಿ ಜಿ.ಎಂ. ರಾಜೇಶ್ವರಿ ಅವರನ್ನು ಆಯ್ಕೆ ಮಾಡಲಾಗಿದ್ದು, ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಹಾಂತೇಶ ಮಸ್ಕಿ ಹಾಗೂ ರಾಯಚೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಸುಗುಣ ಸಿದ್ದನಗೌಡ ಭಾಗವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಯಚೂರು ಕಾನೂನು ವಿದ್ಯಾಲಯದ ಉಪನ್ಯಾಸಕಿ ವಸುಂಧರಾ ಪಾಟೀಲ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ನಿವೃತ್ತ ಮುಖ್ಯಗುರು ದಾನಮ್ಮ ಎಸ್. ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಬಿ. ವಿಜಯ ರಾಜೇಂದ್ರ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತಾಯಪ್ಪ ಬಿ. ಹೊಸೂರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



