ರಾಯಚೂರು, ಸೆ.19: ನಗರದ ಎಂ. ಈರಣ್ಣ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಮೃತರನ್ನು ಸುಚಿತ್ ಕುಮಾರ್ (16) ಹಾಗೂ ಚರಣ್ ಕುಮಾರ್ (14) ಎಂದು ಗುರುತಿಸಲಾಗಿದೆ. ವಿಜಯಕುಮಾರ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗಣೇಶ ಮೂರ್ತಿಯನ್ನು ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಎಂ. ಈರಣ್ಣ ವೃತ್ತದ ಸಮೀಪ ರಸ್ತೆ ಹಂಪ್ ದಾಟುವಾಗ ಸಮತೋಲನ ಕಳೆದುಕೊಂಡಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ನಲ್ಲಿದ್ದ ಸುಚಿತ್ ಕುಮಾರ್ ಮತ್ತು ಚರಣ್ ಕುಮಾರ್ ಕೆಳಗೆ ಬಿದ್ದು ವಾಹನದ ಚಕ್ರಕ್ಕೆ ಸಿಲುಕಿದ್ದಾರೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. ರಾಯಚೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣೇಶ ವಿಸರ್ಜನೆ ಮೆರವಣಿಗೆಯ ಸಂಭ್ರಮದ ನಡುವೆ ನಡೆದ ಈ ದುರಂತದಿಂದ ಸ್ಥಳೀಯರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.



