ರಾಯಚೂರು, ಸೆ.21: ಯುವಜನರು ಪೌಷ್ಟಿಕ ಆಹಾರ ಸೇವನೆ, ನಿಯಮಿತ ಯೋಗ-ಧ್ಯಾನ ಹಾಗೂ ವೈಯಕ್ತಿಕ ಮತ್ತು ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಲಹೆಗಾರ ಬಿ. ರಾಮು ಹೇಳಿದರು.
ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸಿಎಂಎಸ್ಕೆ ಪದವಿ ಮಹಾವಿದ್ಯಾಲಯ, ಎಸ್ಸಿಎಸ್ಎ ಪದವಿ ಪೂರ್ವ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಹದಿಹರೆಯದವರಿಗೆ ಆರೋಗ್ಯ ಮತ್ತು ಶಿಕ್ಷಣ’ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಹದಿಹರೆಯವು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಪ್ರಮುಖ ಘಟ್ಟವಾಗಿದ್ದು, ಈ ಅವಧಿಯಲ್ಲಿ ಉತ್ತಮ ಆಹಾರ ಪದ್ಧತಿ, ವ್ಯಾಯಾಮ, ಯೋಗ, ಧ್ಯಾನ ಮತ್ತು ಸ್ವಚ್ಛತೆಯನ್ನು ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು. ಆರೋಗ್ಯದ ಕುರಿತು ನಿರ್ಲಕ್ಷ್ಯ ವಹಿಸದೆ ಸರಿಯಾದ ಮಾಹಿತಿ ಪಡೆದು ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ತಡೆಯಲು ಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಚ್ಐವಿ ಸೋಂಕು ಹರಡುವ ವಿಧಾನಗಳು, ಸೋಂಕು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಎಚ್ಐವಿ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಅಗತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಲ್ಲದೆ, ಯುವಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದ ‘ಬ್ರೇಕ್ ಫ್ರೀ ಇಂಡಿಯಾ’ ಸಾಮಾಜಿಕ ಜಾಲತಾಣದ ಕುರಿತು ಪರಿಚಯಿಸಿ, ವಿಶ್ವಾಸಾರ್ಹ ಆರೋಗ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಪರ್ವತ ರೆಡ್ಡಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುರೇಶ್ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶರಣಬಸಪ್ಪ ಎಂ., ಉಪನ್ಯಾಸಕರಾದ ರೇಣುಕಾ ಪಾಟೀಲ್, ಪದ್ಮಾವತಿ, ಕವಿತಾ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.



