ಸಿಂಧನೂರು: ತಾಲೂಕಿನ ವಲ್ಕಮದಿನ್ನಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸ್ಥಾಪಿಸಲಾಗಿದ್ದ ತುರ್ತು ಚಿಕಿತ್ಸಾ ಕೇಂದ್ರ ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಜಾಗೃತಿ ಮಳಿಗೆಗೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭೇಟಿ ನೀಡಿ ಪರಿಶೀಲಿಸಿದರು.

ಮಳಿಗೆಯಲ್ಲಿ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು, ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ವಿವಿಧ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಹಾವು ಕಡಿತ ಜಾಗೃತಿ ದಿನದ ಅಂಗವಾಗಿ ಸಿದ್ಧಪಡಿಸಿದ್ದ ಕರಪತ್ರವನ್ನು ಬಿಡುಗಡೆಗೊಳಿಸಿದರು.

ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಬಾದರ್ಲಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅರುಣ ದೇಸಾಯಿ, ತಾಲೂಕು ಆರೋಗ್ಯಾಧಿಕಾರಿ ಡಾ. ಅಯ್ಯನಗೌಡ, ಡಾ. ಶ್ವೇತಾಂಬರಿ, ಡಾ. ಅಮ್ಜದ್ ಶರೀಫ್, ಡಿವೈಎಚ್‌ಇಒ ಬಸಯ್ಯ ಸೇರಿದಂತೆ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.