ಲಿಂಗಸುಗೂರು: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ, ಉತ್ತಮ ಸಿದ್ಧತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಟ್ಟಣದ ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು.
ಶರಣಗೌಡ ಗುರಿಕರ್ ಅವರ ಸಹೋದರರಾದ ಬೆಂಗಳೂರಿನ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹನುಮನಗೌಡ ಪೊಲೀಸ್ ಪಾಟೀಲ್ ಅವರು ರಚಿಸಿರುವ ‘ಪರಮ್’ ಸ್ಪರ್ಧಾತ್ಮಕ ಪುಸ್ತಕವನ್ನು ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ 100 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಯಿತು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನ ಹಾಗೂ ಅಧ್ಯಯನ ಸಾಮಗ್ರಿಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದುಳಿಯಬಾರದು. ಅವರಿಗೆ ಅಗತ್ಯವಾದ ಪುಸ್ತಕಗಳನ್ನು ಒದಗಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿ, ವಿವಿಧ ಸರ್ಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ಸಿದ್ಧರಾಗಲು ನೆರವಾಗಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದರು.
ವಿದ್ಯಾರ್ಥಿಗಳು ದೊರೆತ ಅವಕಾಶ ಮತ್ತು ಅಧ್ಯಯನ ಸಾಮಗ್ರಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಿರಂತರ ಪರಿಶ್ರಮದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ, ಉನ್ನತ ಹುದ್ದೆಗಳನ್ನು ಪಡೆಯುವ ಮೂಲಕ ತಮ್ಮ ಕುಟುಂಬ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಲಾಯಿತು.
ಈ ಸಂದರ್ಭದಲ್ಲಿ ಶರಣಗೌಡ ಗುರಿಕರ್, ಶಿಕ್ಷಕ ಜಮದಗ್ನಿ, ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ನಿರ್ದೇಶಕ ದುರಗಪ್ಪ ಬಂಡೇಭಾವಿ, ಈಶ್ವರ್ ಗುರುಗುಂಟಾ, ಕನಕರಾಯ ಈಚನಾಳ ಸೇರಿದಂತೆ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



