ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.

ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವತಿಯಿಂದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ವರ್ಷದ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲಾ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.

ಹಾಪ್‌ಕಾಮ್ಸ್ ಅಧ್ಯಕ್ಷ ಶಂಕರ ರೆಡ್ಡಿ ಅವರು ಗಣ್ಯರು ಹಾಗೂ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಾಪ್‌ಕಾಮ್ಸ್ ಸದಸ್ಯರು, ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ತೋಟಗಾರಿಕಾ ಬೆಳೆಗಾರರ ಹಿತಾಸಕ್ತಿ ರಕ್ಷಣೆ, ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದು, ಮಾರಾಟ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ವಿಶೇಷವಾಗಿ ರೈತರು ಮತ್ತು ತೋಟಗಾರಿಕಾ ಬೆಳೆಗಾರರು ಬೆಳೆದ ಹಣ್ಣು, ತರಕಾರಿ ಹಾಗೂ ಇತರೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಮತ್ತು ನ್ಯಾಯಯುತ ಮಾರಾಟದ ಅವಕಾಶ ದೊರೆಯುವಂತೆ ಕ್ರಮ ಕೈಗೊಳ್ಳುವುದು, ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ ತಾಜಾ ಉತ್ಪನ್ನಗಳು ತಲುಪುವಂತೆ ಹಾಪ್‌ಕಾಮ್ಸ್‌ನ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಕುರಿತು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ವಿಶ್ವನಾಥ್ ರೆಡ್ಡಿ, ಎಂ.ಡಿ. ನಿಯಾಜ್, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಅಲಿ, ಪದಾಧಿಕಾರಿಗಳಾದ ಶರಣಪ್ಪ ಜಾವೂರ್, ಭೀಮನಗೌಡ ಇಟಗಿ, ನಾಗನಗೌಡ, ಶಶಿರಾಜ್ ಮಸ್ಕಿ, ಲಚಪ್ಪ ನಾಯ್ಕ್, ನಾಗವೇಣಿ, ರಾಜೇಶ್ವರಿ, ಹನುಮಂತ, ಪ್ರಕಾಶ್ ಯಾಕ್ಲಾಸ್ಪುರ್, ಪ್ರತಾಪ್ ರೆಡ್ಡಿ ಸೇರಿದಂತೆ ಸಂಘದ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.