ಮಾನ್ವಿ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ವಿ.ಬಿ. ರಾಮಜೀ) ಯೋಜನೆಯಡಿ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿಗಳ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಲೋಯೋಲ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾ. ಜಾರ್ಜ್ ಹೇಳಿದರು.

ತಾಲೂಕಿನ ಚಿಕ್ಕಲಪರ್ವಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಹಾಗೂ ಲೋಯೋಲ ಸಮಾಜ ಸೇವಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ವಿ.ಬಿ. ರಾಮಜೀ ಯೋಜನೆಯ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಜನೆಯಡಿ ಗ್ರಾಮೀಣ ಪ್ರದೇಶದ ಅರ್ಹ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿಗಳ ಮೂಲಕ ಕೆಲಸ ಒದಗಿಸಲಾಗುತ್ತದೆ. ಸಮಾನ ಕೆಲಸಕ್ಕೆ ಸಮಾನ ಕೂಲಿ ತತ್ವದಡಿ ದಿನಕ್ಕೆ ₹382 ಕೂಲಿ ನಿಗದಿಪಡಿಸಲಾಗಿದ್ದು, ಒಂದು ಕುಟುಂಬಕ್ಕೆ ವರ್ಷದಲ್ಲಿ ಗರಿಷ್ಠ 125 ದಿನಗಳವರೆಗೆ ಉದ್ಯೋಗ ಪಡೆಯಲು ಅವಕಾಶವಿದೆ. ಒಂದು ಗ್ರಾಮೀಣ ಉದ್ಯೋಗ ಖಾತ್ರಿ ಕಾರ್ಡ್ ಮೂಲಕ ವಾರ್ಷಿಕ ಗರಿಷ್ಠ ₹47,750ವರೆಗೆ ಕೂಲಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಯೋಜನೆಯ ನಿಯಮಾನುಸಾರ ನಿಗದಿತ ಪ್ರಮಾಣದ ಕೆಲಸ ನಿರ್ವಹಿಸಿದವರಿಗೆ ಪೂರ್ಣ ಕೂಲಿ ಪಾವತಿಸಲಾಗುತ್ತದೆ. ಕೆಲಸದ ಪ್ರಮಾಣ ಕಡಿಮೆಯಾದಲ್ಲಿ ಅದಕ್ಕೆ ಅನುಗುಣವಾಗಿ ಕೂಲಿ ಪಾವತಿಸಲಾಗುತ್ತದೆ. ನಮೂನೆ–06ರಡಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಉದ್ಯೋಗ ನೀಡದಿದ್ದಲ್ಲಿ ನಿಯಮಾನುಸಾರ ನಿರುದ್ಯೋಗ ಭತ್ಯೆ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.

ನೂತನ ಯೋಜನೆಯಡಿ 318 ವಿಧದ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಕಾಮಗಾರಿ ಸ್ಥಳಗಳಲ್ಲಿ ಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳ ಪ್ರಯೋಜನವನ್ನೂ ಪಡೆದುಕೊಳ್ಳಬಹುದು ಎಂದರು.

ಗ್ರಾಮಸ್ಥರು ಹೆಚ್ಚುವರಿ ಕ್ರಿಯಾಯೋಜನೆಗೆ ಸಂಬಂಧಿಸಿದ ಗ್ರಾಮಸಭೆಗಳಲ್ಲಿ ಭಾಗವಹಿಸಿ ತಮ್ಮ ಅಗತ್ಯಗಳನ್ನು ಪ್ರಸ್ತಾಪಿಸಬೇಕು. ಅರ್ಹ ಫಲಾನುಭವಿಗಳು ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನೂ ಪಡೆದುಕೊಳ್ಳಲು ಅವಕಾಶವಿದೆ ಎಂದು ಫಾ. ಜಾರ್ಜ್ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಲೋಯೋಲ ಸಮಾಜ ಸೇವಾ ಕೇಂದ್ರದ ಕಾರ್ಯಕರ್ತರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಉದ್ಯೋಗ ಚೀಟಿ ಮೇಳದ ಕುರಿತು ಕರಪತ್ರಗಳನ್ನು ವಿತರಿಸಿದರು. ಉದ್ಯೋಗ ಚೀಟಿ ಪಡೆಯುವ ವಿಧಾನ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಅಗತ್ಯ ದಾಖಲೆಗಳ ಕುರಿತು ಗ್ರಾಮಸ್ಥರು ಮತ್ತು ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಲೋಯೋಲ ಸಮಾಜ ಸೇವಾ ಕೇಂದ್ರದ ಸೇವಕಿ ಅನ್ನಮ್ಮ, ತಾಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ನಿರ್ದೇಶಕ ಮಹ್ಮದ್ ಸೇರಿದಂತೆ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.