ರಾಯಚೂರು, ಸೆ.26: ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಿ, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸೆ.29ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡ ಅಂಬರೀಶ ಚಾಗಭಾವಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೃಷಿ ಉತ್ಪಾದನಾ ವೆಚ್ಚವನ್ನು ಆಧರಿಸಿ ಸಿ2+50% ಸೂತ್ರದಂತೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಎಂಬುದು ರೈತರ ಬಹುದಿನಗಳ ಬೇಡಿಕೆಯಾಗಿದೆ. ಹಲವು ವರ್ಷಗಳಿಂದ ರೈತ ಸಂಘಟನೆಗಳು ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಬೇಡಿಕೆಗೆ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ, ಕೂಲಿ ಸೇರಿದಂತೆ ಕೃಷಿ ವೆಚ್ಚಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯುವುದು ಅತ್ಯಗತ್ಯವಾಗಿದೆ. ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಲಾಭದಾಯಕ ಬೆಲೆ ನಿಗದಿಯಾಗದಿದ್ದರೆ ಕೃಷಿಕರ ಆರ್ಥಿಕ ಸಂಕಷ್ಟ ಮತ್ತಷ್ಟು ಹೆಚ್ಚಲಿದೆ ಎಂದು ಅವರು ಹೇಳಿದ್ದಾರೆ.

ಸಿ2+50% ಸೂತ್ರದಂತೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ರೈತರ ಬೇಡಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನಮಂತ್ರಿಯವರ ಗಮನಕ್ಕೆ ತರಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನೆ ಮುತ್ತಿಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸೆ.29ರಂದು ನಡೆಯಲಿರುವ ಹೋರಾಟವನ್ನು ಶಾಂತಿಯುತವಾಗಿ ನಡೆಸಲಾಗುವುದು. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅಂಬರೀಶ ಚಾಗಭಾವಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.