ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿ ಕುರಿತು ಕೇಳಿಬಂದಿರುವ ಆರೋಪಗಳ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದು, ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ಸ್ವತಂತ್ರತೆ, ನಿಷ್ಪಕ್ಷಪಾತತೆ ಹಾಗೂ ಪಾರದರ್ಶಕತೆ ಕಾಪಾಡುವುದು ಅತ್ಯಂತ ಅಗತ್ಯ ಎಂದು ಹೇಳಿದ್ದಾರೆ.

ದೇಶದ ವಿವಿಧ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಂಘಟನೆಗಳು SIR ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದರೂ, ಅವುಗಳನ್ನು ಸಮರ್ಪಕವಾಗಿ ಪರಿಗಣಿಸಲಾಗುತ್ತಿಲ್ಲ ಎಂದು ರವಿ ಪಾಟೀಲ್ ಆರೋಪಿಸಿದ್ದಾರೆ. ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಆಯೋಗದ ಕೆಲವು ನಿರ್ಧಾರಗಳು ಹಾಗೂ ಕ್ರಮಗಳ ಕುರಿತು ಕನಿಷ್ಠ 14 ಬಾರಿ ಲಿಖಿತ ಆಕ್ಷೇಪ ದಾಖಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿರುವ ಅವರು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

SIR ಪ್ರಕ್ರಿಯೆಯಿಂದ ಅರ್ಹ ಮತದಾರರು, ವಿಶೇಷವಾಗಿ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಜನರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎದುರಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮತದಾರರ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಹಾಗೂ ದಾಖಲೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ಪಾರದರ್ಶಕ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಆಯೋಗದಲ್ಲಿರುವ ಮೂವರು ಆಯುಕ್ತರು ಸಾಂವಿಧಾನಿಕ ಜವಾಬ್ದಾರಿಯನ್ನು ಸಮನ್ವಯದಿಂದ ನಿರ್ವಹಿಸಬೇಕಾಗಿದ್ದು, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಎಲ್ಲ ಆಯುಕ್ತರ ಅಭಿಪ್ರಾಯಗಳಿಗೆ ಸೂಕ್ತ ಮಹತ್ವ ನೀಡಬೇಕು. ಉಳಿದ ಆಯುಕ್ತರ ಆಕ್ಷೇಪಗಳನ್ನು ಕಡೆಗಣಿಸಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂಬ ಆರೋಪಗಳು ನಿಜವಾಗಿದ್ದರೆ ಅದು ಗಂಭೀರ ವಿಷಯ ಎಂದು ರವಿ ಪಾಟೀಲ್ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಅರ್ಹ ಮತದಾರರನ್ನು ಹೊರಗಿಡುವುದು ಅಥವಾ ಅವರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಒಪ್ಪಲಾಗದು. ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳಲು SIRಗೆ ಸಂಬಂಧಿಸಿದ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸಿ, ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ರವಿ ಪಾಟೀಲ್ ಆಗ್ರಹಿಸಿದ್ದಾರೆ.