ರಾಯಚೂರು: ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಸ್ವಚ್ಛತಾ ಶ್ರಮದಾನ ಹಮ್ಮಿಕೊಂಡು “ಸ್ವಚ್ಛತೆಯೇ ಸೇವೆ” ಎಂಬ ಸಂದೇಶವನ್ನು ಸಾರಿತು.

ಅಕ್ಟೋಬರ್ 2ರಂದು ನಡೆಯಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಪೂರ್ವಭಾವಿಯಾಗಿ ಸೆಪ್ಟೆಂಬರ್ 24ರಂದು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ಕಸ ಹಾಗೂ ಪ್ಲಾಸ್ಟಿಕ್ ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸಂತೋಷಕುಮಾರ ರೇವೂರ, ಮಹಾತ್ಮ ಗಾಂಧೀಜಿಯವರ ಚಿಂತನೆ ಮತ್ತು ಆದರ್ಶಗಳ ಅಡಿಪಾಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ರೂಪುಗೊಂಡಿದ್ದು, ಅವರ ಸ್ವಚ್ಛ ಭಾರತದ ಕನಸು ಹಾಗೂ ಭಾರತ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ಆಶಯಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎನ್‌ಎಸ್‌ಎಸ್ ನಿರಂತರವಾಗಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದು ವಾರದ “ಸ್ವಚ್ಛತಾ ಹೀ ಸೇವಾ” ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮೊದಲ ದಿನ ಕಾಲೇಜಿನ ಆವರಣವನ್ನು ಕಸ ಮತ್ತು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯ ನಡೆಸಲಾಗಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಬೃಹತ್ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳುವ ಮೂಲಕ ಅಭಿಯಾನವನ್ನು ಸಮಾರೋಪಗೊಳಿಸಲಾಗುವುದು ಎಂದು ತಿಳಿಸಿದರು.

ಎನ್‌ಎಸ್‌ಎಸ್ ಸ್ವಯಂಸೇವಕಿಯರಾದ ಜೆ.ಎಸ್. ಸುಷ್ಮಾ, ಸುವರ್ಣಾ, ರೇಖಾ, ಜಮುಲಮ್ಮ, ಮಹೇಶ್ವರಿ, ಸಂಗೀತಾ ವಿರೂಪಾಕ್ಷ, ಅನ್ನಪೂರ್ಣ ಹಾಗೂ ಜಮುನಾ ಸ್ವಚ್ಛತಾ ಶ್ರಮದಾನದ ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಡಾ. ಎಸ್.ಆರ್. ಪರ್ವೀನ್, ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಡಾ. ಉಮಾದೇವಿ, ವಿದ್ಯಾರ್ಥಿ ಕುಂದುಕೊರತೆ ನಿವಾರಣಾ ಕೋಶದ ಸಂಯೋಜಕಿ ಸುಮಿತ್ರಾ ಪ್ಯಾಟಿ, ಉದ್ಯೋಗ ಭರವಸಾ ಕೋಶದ ಸಂಚಾಲಕ ರಂಗನಾಥ ಬಿಲ್ಲಾರ್, ಉಪನ್ಯಾಸಕ ಅಮರೇಶ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.