ರಾಯಚೂರು: ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹಾಗೂ ಆನ್‌ಲೈನ್ ವಂಚನೆಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೆಂಟರ್ ಫಾರ್ ಫೈನಾನ್ಸಿಯಲ್ ಲಿಟ್ರಸಿ ರಾಯಚೂರು ಸಂಚಾಲಕ ಈರೇಶ ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸೆ.26ರಂದು ಕೆವೈಸಿ, ರಿ-ಕೆವೈಸಿ, ಇ-ಕೆವೈಸಿ, ಖಾತೆ ನಿರ್ವಹಣೆ, ಸೈಬರ್ ಅಪರಾಧ ತಡೆಗಟ್ಟುವಿಕೆ ಹಾಗೂ ಸಾಮಾಜಿಕ ಭದ್ರತೆ ಕುರಿತು ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಬ್ಯಾಂಕ್ ಖಾತೆಗೆ ಸಂಬಂಧಿಸಿದ ವೈಯಕ್ತಿಕ ಮಾಹಿತಿಯನ್ನು ಕಾಲಕಾಲಕ್ಕೆ ನವೀಕರಿಸುವುದು ಹಾಗೂ ಬ್ಯಾಂಕಿಂಗ್ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದು ಅತ್ಯಂತ ಮುಖ್ಯವಾಗಿದೆ. ಫಿಶಿಂಗ್, ನಕಲಿ ಲಿಂಕ್‌ಗಳು, ವಂಚನೆಯ ದೂರವಾಣಿ ಕರೆಗಳು ಹಾಗೂ ವಿವಿಧ ರೀತಿಯ ಆನ್‌ಲೈನ್ ವಂಚನೆಗಳ ಬಗ್ಗೆ ಜಾಗೃತಿ ಹೊಂದಬೇಕು. ಬ್ಯಾಂಕ್ ಖಾತೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುಗುಣ ಬಸವರಾಜ ಮಾತನಾಡಿ, ವಿದ್ಯಾರ್ಥಿಗಳಿಗೆ ಹಣಕಾಸು ಹಾಗೂ ಡಿಜಿಟಲ್ ಸುರಕ್ಷತೆಯ ಕುರಿತು ಅರಿವು ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕತೆ ವಹಿಸಬೇಕು. ಜವಾಬ್ದಾರಿಯುತ ಡಿಜಿಟಲ್ ಬಳಕೆಯನ್ನು ರೂಢಿಸಿಕೊಳ್ಳುವುದರೊಂದಿಗೆ ಬ್ಯಾಂಕ್ ಖಾತೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕಿ ಡಾ. ಸ್ವರೂಪರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಉಮಾದೇವಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಐಕ್ಯೂಎಸಿ ಸಂಚಾಲಕಿ ಹಾಗೂ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಜ್ಯೋತಿ ಸಿ.ಕೆ. ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು. ಐಕ್ಯೂಎಸಿ ಸಹ ಸಂಚಾಲಕ ಶರಣಗೌಡ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹ ಪ್ರಾಧ್ಯಾಪಕರಾದ ಡಾ. ಸೈಯಿದಾ ರಷೀದಾ ಪರವಿನ್, ಸುಮಿತ್ರಾ ಪ್ಯಾಟಿ, ಡಾ. ಅಸ್ಮಾ, ಅತಿಥಿ ಉಪನ್ಯಾಸಕಿ ಪ್ರಿಯಾಂಕ ಹಾಗೂ ರಾಯಚೂರಿನ ಫೀಲ್ಡ್ ಅಸೋಸಿಯೇಟ್ ಯಾದಮ್ಮ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಬಿ.ಕಾಂ. ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು.