ದೇವದುರ್ಗ: ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಧ್ವನಿವರ್ಧಕ ಬಳಸಿ ಸಿಬ್ಬಂದಿ ಸಂಭ್ರಮಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೇವದುರ್ಗ ತಾಲೂಕು ಘಟಕ, ಈ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಈ ಸಂಬಂಧ ಕರವೇ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸೆ.14ರಂದು ದೇವದುರ್ಗ ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಇದೇ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಧ್ವನಿವರ್ಧಕ ಬಳಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ದೇವದುರ್ಗ ತಾಲೂಕನ್ನು ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಿಸಿರುವ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಸ್ಪಂದಿಸಬೇಕಾದ ಅಧಿಕಾರಿಗಳು ಕಚೇರಿಯಲ್ಲಿ ಈ ರೀತಿಯ ಆಚರಣೆಯಲ್ಲಿ ತೊಡಗಿರುವುದು ಸೂಕ್ತವಲ್ಲ ಎಂದು ಸಂಘಟನೆ ಆಕ್ಷೇಪಿಸಿದೆ. ಸರ್ಕಾರಿ ಕಚೇರಿಗಳು ಸಾರ್ವಜನಿಕ ಆಡಳಿತದ ಕೇಂದ್ರಗಳಾಗಿದ್ದು, ಅಲ್ಲಿ ಕಾರ್ಯಕ್ರಮಗಳನ್ನು ನಡೆಸುವಾಗ ಸರ್ಕಾರದ ನಿಯಮ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆಗ್ರಹಿಸಿದೆ.
ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಅವರ ನೇತೃತ್ವದಲ್ಲಿ ಗಣೇಶ ಪ್ರತಿಷ್ಠಾಪನೆ ನಡೆದಿದ್ದು, ಕೆಲವು ಸಿಬ್ಬಂದಿ ಧ್ವನಿವರ್ಧಕ ಬಳಸಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಉಪತಹಶೀಲ್ದಾರ್ ಗೋವಿಂದ, ದೀಪಾ, ಅಭಿಷೇಕ್, ರವಿಕುಮಾರ್, ಶ್ರೀಶೈಲ್, ವೀರೇಶ್, ನಾಗೇಶ್, ಅನಿಲ್ ಕುಮಾರ್ ಹಾಗೂ ಫಿಲೀಪ್ ಅಲಿಯಾಸ್ ದಿಲೀಪ್ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಜಿಲ್ಲಾಧಿಕಾರಿಗಳು ಪ್ರಕರಣದ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಆರೋಪಗಳು ಸತ್ಯವೆಂದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಹಾಗೂ ಇಲಾಖಾ ಕ್ರಮ ಜರುಗಿಸಬೇಕು. ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು ಎಂದು ಕರವೇ ಪದಾಧಿಕಾರಿಗಳು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ದೇವದುರ್ಗ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ದೇವದುರ್ಗ ತಾಲೂಕು ಅಧ್ಯಕ್ಷ ಬಸವರಾಜ ಗೋಪಾಳವ, ತಾಲೂಕು ನಗರ ಘಟಕದ ಕಾರ್ಯದರ್ಶಿ ಅಮೀರ ಹವಾಲ್ದಾರ, ತಾಲೂಕು ಉಪಾಧ್ಯಕ್ಷ ಸಂತೋಷ ಜಿನ್ನಾಪೂರ ಹಾಗೂ ದೇವದುರ್ಗ ತಾಲೂಕು ನಗರ ಘಟಕದ ಅಧ್ಯಕ್ಷ ಹುಸೇನ್ಬಾಷ ಗೌರಂಪೇಟೆ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.



