ರಾಯಚೂರು, ಸೆ.27: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ತಾಯಿ ಮತ್ತು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾವಹಿಸಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ರಜನಿ ಎಂ. ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡ ಅವರು ಗುಂಜಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಜಿಲ್ಲಾ ಔಷಧ ಉಗ್ರಾಣಕ್ಕೆ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು.
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ಕೊಠಡಿ, ಹೆರಿಗೆ ವಾರ್ಡ್, ಔಷಧ ವಿಭಾಗ, ಪ್ರಯೋಗಾಲಯ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಂದಿರು ಹಾಗೂ ಸಾರ್ವಜನಿಕರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ ಮತ್ತು ಇತರ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡರು.
ತಾಯಿ ಮತ್ತು ಮಗುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಸ್ಪತ್ರೆಗೆ ಬರುವ ಪ್ರತಿಯೊಬ್ಬರೊಂದಿಗೂ ವೈದ್ಯರು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ಅಗತ್ಯ ಚಿಕಿತ್ಸೆ ಮತ್ತು ಮಾರ್ಗದರ್ಶನ ನೀಡಬೇಕು. ಆಸ್ಪತ್ರೆಯ ಒಳ ಹಾಗೂ ಹೊರ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದರೊಂದಿಗೆ ರೋಗಿಗಳಿಗೆ ಗುಣಮಟ್ಟದ ಸೇವೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಬಳಿಕ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಸ್ಕಿಲ್ ಲ್ಯಾಬ್ಗೆ ಭೇಟಿ ನೀಡಿದ ಡಾ. ರಜನಿ ಎಂ., ಹೆರಿಗೆ ನಿರ್ವಹಣೆಗೆ ಸಂಬಂಧಿಸಿದ ತಾಂತ್ರಿಕ ಕೌಶಲ್ಯ ಹಾಗೂ ತರಬೇತಿ ಚಟುವಟಿಕೆಗಳ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್., ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಸುರೇಂದ್ರಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್ ಕೆ., ಡಿಎಫ್ಡಬ್ಲ್ಯುಒ ಡಾ. ಶಿವಕುಮಾರ್ ನಾರಾ, ಡಿಟಿಒ ಡಾ. ಯಶೋಧಾ, ಕೆಸೆಪ್ಸ್ನ ಹಿರಿಯ ಫಾರ್ಮಸಿ ಅಧಿಕಾರಿ ವಿಜಯಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ್ ಕೆ., ನಿರ್ದೇಶನಾಲಯದ ಕಚೇರಿ ಅಧೀಕ್ಷಕ ಪಿ.ಎಂ. ರಮೇಶ್ ಸೇರಿದಂತೆ ಆಡಳಿತ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



