ಮಾನ್ವಿ: ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೇ ಓದಿನೊಂದಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಬೆಳೆಸಿಕೊಳ್ಳಬೇಕು. ಅದಕ್ಕಾಗಿ ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಬೆಂಗಳೂರಿನ ಸಂಪನ್ಮೂಲ ವ್ಯಕ್ತಿ ಕುಸುಮ ಸಲಹೆ ನೀಡಿದರು.

ಪಟ್ಟಣದ ಕಾಕತಿಯ ಶಾಲೆಯಲ್ಲಿ ಸಮುತ್ಕರ್ಷ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ 15 ರವಿವಾರಗಳ ‘ಶ್ರದ್ಧಾ ಮೇಧಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಚಲಿತ ವಿದ್ಯಮಾನಗಳ ಜ್ಞಾನವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಠ್ಯಪುಸ್ತಕಗಳ ಓದಿನ ಜೊತೆಗೆ ದೇಶ-ವಿದೇಶದ ಬೆಳವಣಿಗೆಗಳು, ವಿಜ್ಞಾನ, ತಂತ್ರಜ್ಞಾನ, ಆರ್ಥಿಕತೆ ಹಾಗೂ ಸಮಾಜಕ್ಕೆ ಸಂಬಂಧಿಸಿದ ವಿಷಯಗಳನ್ನು ತಿಳಿದುಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಮುತ್ಕರ್ಷ ಸಂಸ್ಥೆಯ ನರಸಿಂಹಮೂರ್ತಿ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡಬೇಕು. ಯೋಜಿತ ರೀತಿಯಲ್ಲಿ ದಿನಚರಿ ರೂಪಿಸಿಕೊಂಡು ಸತತ ಅಭ್ಯಾಸ ಮಾಡಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಉದಯ್ ಕುಮಾರ್ ಪತ್ತಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ಸ್ಪಷ್ಟ ಗುರಿ ನಿಗದಿಪಡಿಸಿಕೊಂಡರೆ ಮುಂದಿನ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯ. ಸರ್ ಸಿ.ವಿ. ರಾಮನ್ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ಮಹನೀಯರ ಜೀವನ ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳು ಮಾದರಿಯಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಮುತ್ಕರ್ಷ ಸಂಸ್ಥೆಯ ಡಾ. ವಿವೇಕಾನಂದ ಹಬೀಬ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಸ್ಥೆ ಸದಾ ಬದ್ಧವಾಗಿದ್ದು, ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲು ಸಿದ್ಧವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಕುಸುಮ ಅವರನ್ನು ಸಮುತ್ಕರ್ಷ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.