ಲಿಂಗಸೂಗೂರು: ಬಂಜಾರ (ಲಂಬಾಣಿ) ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ಹನುಮಂತ ರಾಠೋಡ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ ಸಮುದಾಯವು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ವಾಸಿಸುತ್ತಿದ್ದು, ಸಮುದಾಯದ ಜನರು ಶಿಕ್ಷಣ, ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಬಂಜಾರ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ಅಧ್ಯಯನ ನಡೆಸಿ, ಅಗತ್ಯ ಸೌಲಭ್ಯಗಳು ಮತ್ತು ಸೂಕ್ತ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಂಜಾರ ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ಸಮುದಾಯದ ಶೈಕ್ಷಣಿಕ, ಜನಸಂಖ್ಯಾ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಾಹಿತಿಯನ್ನು ಸಮಗ್ರವಾಗಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಬೇಕು. ಬಂಜಾರ ಭಾಷೆಯಲ್ಲಿ ಪುಸ್ತಕಗಳು ಮತ್ತು ಪಠ್ಯಸಾಮಗ್ರಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಸಂಶೋಧನಾ ಕೇಂದ್ರಗಳಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.
ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ಬಂಜಾರ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಅಧ್ಯಯನಕ್ಕೆ ಅವಕಾಶ ಕಲ್ಪಿಸಬೇಕು. ಭಾಷೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮಗಳು ಹಾಗೂ ಸಮುದಾಯದ ಯುವಕರ ಕೌಶಲ್ಯಾಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಬೇಡಿಕೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ರಾಠೋಡ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೋದು ನಾಯಕ ಉಪಸ್ಥಿತರಿದ್ದರು.



