ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡುಗಡ್ಡೆ ಮಲಕಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ನಿಮ್ಮ ಆರೋಗ್ಯ ಊಟದ ತಟ್ಟೆಯಲ್ಲಿ’ ಎಂಬ ಸಂದೇಶದೊಂದಿಗೆ ಗ್ರಾಮ ಆರೋಗ್ಯ ಮತ್ತು ಪೌಷ್ಟಿಕ ಆಹಾರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮದ ಗರ್ಭಿಣಿಯರು ಹಾಗೂ ಬಾಣಂತಿಯರು ಭಾಗವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ಮಾತನಾಡಿ, ಗರ್ಭಾವಸ್ಥೆಯಲ್ಲಿ ಪೌಷ್ಟಿಕ ಮತ್ತು ಸಮತೋಲಿತ ಆಹಾರ ಸೇವಿಸುವುದರಿಂದ ತಾಯಿ ಹಾಗೂ ಮಗುವಿನ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಪೌಷ್ಟಿಕ ಆಹಾರದ ಕೊರತೆಯಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಆಹಾರ ಪದ್ಧತಿಯ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಆಹಾರದಲ್ಲಿ ಪ್ರೋಟೀನ್, ವಿಟಮಿನ್, ಖನಿಜಾಂಶ, ಕಾರ್ಬೋಹೈಡ್ರೇಟ್ ಹಾಗೂ ಅಗತ್ಯ ಕೊಬ್ಬಿನಾಂಶ ಇರುವಂತೆ ನೋಡಿಕೊಳ್ಳಬೇಕು. ಹಸಿರು ತರಕಾರಿ, ಹಣ್ಣು, ಮೊಟ್ಟೆ, ಮೀನು, ಮೊಳಕೆ ಕಾಳುಗಳು, ತುಪ್ಪ ಮತ್ತು ಬೆಲ್ಲ ಸೇರಿದಂತೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸಬೇಕು ಎಂದು ಸಲಹೆ ನೀಡಿದರು.
ಸ್ವಚ್ಛ ಅಡುಗೆಮನೆ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತರಕಾರಿಗಳನ್ನು ಸ್ವಚ್ಛವಾಗಿ ತೊಳೆದು ಬಳಸಬೇಕು, ಅಡುಗೆಯಲ್ಲಿ ಅಯೋಡಿನ್ಯುಕ್ತ ಉಪ್ಪು ಉಪಯೋಗಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರು ವೈದ್ಯಕೀಯ ಸಲಹೆಯಂತೆ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶದ ಮಾತ್ರೆಗಳನ್ನು ಸೇವಿಸಿ, ಆರೋಗ್ಯ ಉಪಕೇಂದ್ರದಲ್ಲಿ ದೊರೆಯುವ ಸೇವೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೂದೇಮ್ಮ ಮಾತನಾಡಿ, ಗರ್ಭಿಣಿಯರು ಪ್ರತಿ ತಿಂಗಳು ತಪ್ಪದೆ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಸಾಧ್ಯವಾದಷ್ಟು ಮನೆಯಲ್ಲೇ ತಯಾರಿಸಿದ ಪೌಷ್ಟಿಕ ಆಹಾರ ಸೇವಿಸಿ, ಬೇಕರಿ ಪದಾರ್ಥ ಹಾಗೂ ಜಂಕ್ ಫುಡ್ ಸೇವನೆಯನ್ನು ಕಡಿಮೆ ಮಾಡಬೇಕು. ಗರ್ಭಾವಸ್ಥೆಯಲ್ಲಿ ವೈಯಕ್ತಿಕ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಬಾಣಂತಿಯರು ಕುಟುಂಬ ಯೋಜನೆಯ ಸೂಕ್ತ ವಿಧಾನಗಳನ್ನು ಅಳವಡಿಸಿಕೊಂಡು ಮಕ್ಕಳ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಪಾಡಿಕೊಳ್ಳಬೇಕು. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆ ತಿರುಮಲಮ್ಮ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ದೊರೆಯುವ ವಿವಿಧ ಸೇವೆಗಳ ಕುರಿತು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆ ಹಸೀನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



