ಲಿಂಗಸಗೂರು: ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಾಲ್ವರು ಶಿಕ್ಷಕ–ಉಪನ್ಯಾಸಕರನ್ನು ಉತ್ತಮ ಶಿಕ್ಷಕ ಹಾಗೂ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಸುಧಾಮೂರ್ತಿ ಇನ್ಫೋ ಮಹಿಳಾ ಪದವಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಮಾರುತಿ ರಾಂಪುರ್ ಅವರು ತಾಲೂಕು ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ವಿಷಯವನ್ನು ಸರಳವಾಗಿ ಮನವರಿಕೆ ಮಾಡಿಕೊಡುವುದರ ಜೊತೆಗೆ ಅವರ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಮಾರ್ಗದರ್ಶನ ನೀಡುತ್ತಿರುವ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಡಾ. ಸುಧಾಮೂರ್ತಿ ಇನ್ಫೋ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಕೃಷ್ಣಪ್ಪ ಅವರು ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಜ್ಞಾನ, ಬೋಧನಾ ಅನುಭವ ಹಾಗೂ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೃಂದಾವನ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಶಿಕ್ಷಕಿ ತಬಸುಮ್ ಅವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಿ, ಪ್ರೀತಿ ಮತ್ತು ಕಾಳಜಿಯಿಂದ ಬೋಧನೆ ಮಾಡುತ್ತಿರುವ ಅವರ ಸೇವೆಯನ್ನು ಗುರುತಿಸಲಾಗಿದೆ.

ಇದೇ ಸಂಸ್ಥೆಯ ಶ್ರೀ ಗೋವಿಂದ ಕಾರಜೋಳ ಇಂಟರ್‌ನ್ಯಾಷನಲ್ ಶಾಲೆಯ ಶಿಕ್ಷಕಿ ಅಯ್ಯಮ್ಮ ಅವರನ್ನೂ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಕ್ಕಳ ಶಿಕ್ಷಣದ ಜೊತೆಗೆ ಅವರಲ್ಲಿನ ಪ್ರತಿಭೆ, ಶಿಸ್ತು, ಸಂಸ್ಕಾರ ಹಾಗೂ ಸೃಜನಶೀಲತೆಯನ್ನು ಬೆಳೆಸುವಲ್ಲಿ ಅವರು ವಹಿಸುತ್ತಿರುವ ಪಾತ್ರವನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಒಂದೇ ಶಿಕ್ಷಣ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಶಿಕ್ಷಕ–ಉಪನ್ಯಾಸಕರು ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.