ರಾಯಚೂರು, ಸೆ.30: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ, ಸುಗಮ ಹಾಗೂ ಗುಣಮಟ್ಟದ ಸೇವೆ ಒದಗಿಸುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು, ಬೆಂಗಳೂರು ಅವರು ಸೆ.27ರಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ, ಸೆ.30ರಂದು ತಾಲೂಕು ಆರೋಗ್ಯ ಅಧಿಕಾರಿಗಳು ಮರುಪರಿಶೀಲನೆ ನಡೆಸಿ ಆಸ್ಪತ್ರೆಯ ವಿವಿಧ ಸೇವೆಗಳ ಕಾರ್ಯವೈಖರಿಯನ್ನು ಅವಲೋಕಿಸಿದರು.
ಆಸ್ಪತ್ರೆಗೆ ಬರುವ ಗರ್ಭಿಣಿಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ದೊರೆಯುವಂತೆ ಕ್ರಮ ವಹಿಸಬೇಕು. ವಿಶೇಷವಾಗಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಗರ್ಭಿಣಿಯರು ಮತ್ತು ಮಕ್ಕಳಿಗೆ ಪ್ರಥಮ ಆದ್ಯತೆ ನೀಡಿ, ಅನಗತ್ಯ ವಿಳಂಬವಾಗದಂತೆ ಸೇವೆ ಒದಗಿಸಬೇಕು ಎಂದು ನಿರ್ದೇಶಿಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪರಿಶೀಲನಾ ಸಭೆ ನಡೆಸಿ, ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಲಾಯಿತು. ಆಸ್ಪತ್ರೆಯ ಆವರಣ ಮತ್ತು ಶೌಚಾಲಯಗಳನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ, ಆಸ್ಪತ್ರೆಗೆ ಬರುವ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿಗಳು ತಿಳಿಸಿದರು.



