ರಾಯಚೂರು, ಅ.2: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದಯ್ಯ ತಾತ ಗುರುವಿನ ಮಾತನಾಡಿ, ಎನ್ಎಸ್ಎಸ್ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ಸಕಾರಾತ್ಮಕ ಮನೋಭಾವ ಬೆಳೆಸಲು ಸಹಕಾರಿಯಾಗಲಿ ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಅಶೋಕ್ ಪಾಟೀಲ್ ಅತನೂರು ಮಾತನಾಡಿ, ‘ನನಗಲ್ಲ, ನಿನಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುವ ಎನ್ಎಸ್ಎಸ್ ಸ್ವಯಂಸೇವಕರು ಜಾತಿ, ಮತ ಭೇದಗಳನ್ನು ಮರೆತು ಸಹಬಾಳ್ವೆ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳುತ್ತಾರೆ. ಲಕ್ಷಾಂತರ ಯುವಜನರ ಸರ್ವಾಂಗೀಣ ಬೆಳವಣಿಗೆಯಲ್ಲಿ ಎನ್ಎಸ್ಎಸ್ ಮಹತ್ವದ ಪಾತ್ರ ವಹಿಸುತ್ತಿದೆ. ಶಿಬಿರಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಬೇಕು ಎಂದರು.
ಎಸ್ಎಲ್ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದ ಸಮಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಿರಿಮಲ್ಲಪ್ಪ ಕರಡೇಕಲ್, ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ ಮತ್ತು ಉದ್ದೇಶಗಳನ್ನು ಪ್ರತಿಯೊಬ್ಬ ಶಿಬಿರಾರ್ಥಿಯೂ ಅರಿತುಕೊಳ್ಳಬೇಕು ಎಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಂಜುನಾಥ ಪಾಟೀಲ ವಟಗಲ ಮಾತನಾಡಿ, ಒಂದು ವಾರದ ಶಿಬಿರದಲ್ಲಿ ಪಡೆಯುವ ಅನುಭವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಾಯಕತ್ವ ಗುಣ ಬೆಳೆಸಿಕೊಳ್ಳುವುದರೊಂದಿಗೆ ಸಮಾಜಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ದೊರೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಶರಣ ಭೂಪಾಲ ನಾಡಗೌಡ, ವಿದ್ಯಾರ್ಥಿಗಳು ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅದರ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಶಶಿಕುಮಾರ್ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳು ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.



