ಸಿಂಧನೂರು: ಮೆದುಳು ಜ್ವರದಂತಹ ಮಾರಕ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸಲು ಎರಡು ವರ್ಷದೊಳಗಿನ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಜೆ.ಇ. ಲಸಿಕೆಯನ್ನು ತಪ್ಪದೇ ಹಾಕಿಸಬೇಕು ಎಂದು ಸಾಲಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಲಕ್ಷ್ಮಿ ಕನಕಿ ತಿಳಿಸಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ತಾಲೂಕು ಆರೋಗ್ಯ ಇಲಾಖೆ ಸಿಂಧನೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಸಾಲಗುಂದ ಗ್ರಾಮದಲ್ಲಿ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ತಂಡ ಹಾಗೂ ಸರ್ವೇಕ್ಷಣಾ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಮುದಾಯ ಮಟ್ಟದ ಶಿಕ್ಷಣಕ್ಕಾಗಿ ಆಗಮಿಸಿದ್ದ ಸನ್ ರೈಜ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಆರೋಗ್ಯ ಇಲಾಖೆ ತಂಡವು ಸೊಳ್ಳೆಗಳ ಸಾಂದ್ರತೆ ಹಾಗೂ ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳನ್ನು ಪರಿಶೀಲಿಸಿ, ಗ್ರಾಮಸ್ಥರಿಗೆ ರೋಗ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿತು.
ತಾಲೂಕು ವಿಬಿಡಿ ಮೇಲ್ವಿಚಾರಕ ಎಫ್.ಎ. ಹಣಗಿ ಮಾತನಾಡಿ, ತೀವ್ರ ಜ್ವರ, ತಲೆನೋವು, ಮಂಪರು, ಕುತ್ತಿಗೆ ಬಿಗಿತ, ಅಸಹಜ ವರ್ತನೆ ಹಾಗೂ ಕೈಕಾಲುಗಳ ಸ್ವಾಧೀನ ಕಳೆದುಕೊಳ್ಳುವಂತಹ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು. ಮೆದುಳು ಜ್ವರ ಹರಡುವ ಸೊಳ್ಳೆಗಳ ಉತ್ಪತ್ತಿ ಹಾಗೂ ಅವುಗಳಿಂದ ರಕ್ಷಿಸಿಕೊಳ್ಳುವ ವಿಧಾನಗಳ ಬಗ್ಗೆಯೂ ವಿವರಿಸಿದರು.
ಸಾಂಕ್ರಾಮಿಕ ರೋಗಶಾಸ್ತ್ರಜ್ಞ ನಿಖಿಲ್ ಹೊಸಮನಿ ಮಾತನಾಡಿ, ಮನೆ ಹಾಗೂ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸೊಳ್ಳೆ ಪರದೆಗಳನ್ನು ಬಳಸುವುದು, ಮೈತುಂಬ ಬಟ್ಟೆ ಧರಿಸುವುದು ಹಾಗೂ ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳುವ ಕ್ರಮಗಳನ್ನು ಅನುಸರಿಸುವ ಮೂಲಕ ರೋಗ ಹರಡುವ ಅಪಾಯವನ್ನು ಕಡಿಮೆ ಮಾಡಬಹುದು ಎಂದರು.
ಡಾ. ಲಕ್ಷ್ಮಿ ಕನಕಿ ಮಾತನಾಡಿ, ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದೆ. ಮಕ್ಕಳಿಗೆ ನಿಗದಿತ ಸಮಯದಲ್ಲಿ ಜೆ.ಇ. ಸೇರಿದಂತೆ ಅಗತ್ಯ ಲಸಿಕೆಗಳನ್ನು ಹಾಕಿಸುವುದರ ಜೊತೆಗೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಣ್ಣ ನಿರ್ಲಕ್ಷ್ಯವೂ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪೋಷಕರು ಲಸಿಕಾಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಸೈಫ್ ಖಾನ್, ಹಿರಿಯ ಪಿಎಚ್ಸಿಓ ಕಸ್ತೂರಿ ಭೈರಮಟ್ಟಿ, ಪಿಎಚ್ಸಿಓ ಅಂಬಮ್ಮ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ, ಫಾತಿಮಾ, ಅನ್ನಪೂರ್ಣ, ಲಕ್ಷ್ಮಿ ಎಚ್., ಆಂಜನೇಯ, ಹಾಜರಾ ಬೇಗಂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



