ರಾಯಚೂರು, ಅ.3: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಕಮಲಾಕ್ಷಿ ತಂದೆ ಮಾಲೀ ಪಾಟೀಲ್ ಅವರು, ಇದೀಗ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.30ರಂದು ಆಯೋಜಿಸಿದ್ದ 2026-27ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ (ಸಿ.ಎಂ. ಕಪ್–2026)ದಲ್ಲಿ ಕಮಲಾಕ್ಷಿ 57 ಕೆ.ಜಿ. ವಿಭಾಗದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು ಎದುರಾಳಿಗಳನ್ನು ಮಣಿಸಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡರು. ಸಾಧನೆಗಾಗಿ ಇಲಾಖೆಯ ವತಿಯಿಂದ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಇದಕ್ಕೂ ಮುನ್ನ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ 55 ಕೆ.ಜಿ. ವಿಭಾಗದ ಮಹಿಳಾ ಕುಸ್ತಿ ಸ್ಪರ್ಧೆಯಲ್ಲೂ ಕಮಲಾಕ್ಷಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದರು. ಜಿಲ್ಲಾ ಮಟ್ಟದ ಯಶಸ್ಸಿನ ಬಳಿಕ ವಿಭಾಗ ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆಯುವ ಮೂಲಕ ತಮ್ಮ ಕುಸ್ತಿ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕಮಲಾಕ್ಷಿ ಅವರ ಸಾಧನೆಗೆ ಕುಟುಂಬಸ್ಥರು, ತರಬೇತುದಾರರು, ಸ್ನೇಹಿತರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.