ಲಿಂಗಸುಗೂರು: ಪುರಸಭೆಯ ವಾರ್ಡ್ ನಂ.18ರ ಡಾ. ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಸಮೀಪ ಚರಂಡಿ ನೀರು ಮುಖ್ಯ ರಸ್ತೆಗೆ ಹರಿದು ನಿಂತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಚರಂಡಿ ಸ್ವಚ್ಛಗೊಳಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಸಹಾಯಕ ಆಯುಕ್ತರು ಹಾಗೂ ಪುರಸಭೆ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಿದರು.

ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡಿರುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯ ಮಧ್ಯಭಾಗದಲ್ಲಿ ಸಂಗ್ರಹವಾಗುತ್ತಿದೆ. ಇದರಿಂದ ದುರ್ವಾಸನೆ ಹರಡುತ್ತಿದ್ದು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಹಾಗೂ ದ್ವಿಚಕ್ರ ವಾಹನ ಸವಾರರ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ ಎಂದು ನಿವಾಸಿಗಳು ದೂರಿದರು.

ಕೊಳಚೆ ನೀರು ದೀರ್ಘಕಾಲ ನಿಂತಿರುವುದರಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪುರಸಭೆ ಅಧಿಕಾರಿಗಳು ತಕ್ಷಣ ಚರಂಡಿಯನ್ನು ಸ್ವಚ್ಛಗೊಳಿಸಿ, ಕೊಳಚೆ ನೀರು ರಸ್ತೆಗೆ ಹರಿಯದಂತೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಮಸ್ಯೆ ಕುರಿತು ಸಲ್ಲಿಸಿರುವ ಮನವಿಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ನಿವಾಸಿಗಳು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಈರಣ್ಣ ಗುಡಿಹಾಳ, ಚಂದ್ರಯ್ಯ, ಅಮರಮ್ಮ, ಸುರೇಖಾ, ಪೂಜಾ, ಶಾಂತಲಾ, ಸಂತೋಷಕುಮಾರ, ಅಬ್ದುಲ್, ಪೂಜಾ ಹಿರೇಮಠ, ಎಲ್.ಎಂ. ನಡುವಿನಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.