ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ಜಿ. ನಮೋಶಿ ಅವರು ಅ.5ರಂದು ಕಲಬುರಗಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, ಈ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ನ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರಣ್ಣಗೌಡ ಲೆಕ್ಕಿಹಾಳ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಬಳಿಕ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯಮಟ್ಟದಲ್ಲಿ ಸಮನ್ವಯ ಸಭೆಗಳು ನಡೆದಿವೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿಯೂ ಉಭಯ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದು, ವರಿಷ್ಠರ ಸೂಚನೆಯಂತೆ ಶಶೀಲ್ ಜಿ. ನಮೋಶಿ ಅವರ ಪರ ಜಂಟಿಯಾಗಿ ಪ್ರಚಾರ ನಡೆಸಲಾಗುವುದು ಎಂದರು.
ಕ್ಷೇತ್ರದಲ್ಲಿ ಈಗಾಗಲೇ ಅಭ್ಯರ್ಥಿ ಪರ ಮತಯಾಚನೆ ಆರಂಭಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಬೇಕು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವೇ ಪ್ರಮುಖ ಗುರಿಯಾಗಿದ್ದು, ರಾಜ್ಯ ನಾಯಕರ ನಿರ್ದೇಶನದಂತೆ ಸಂಘಟಿತ ಪ್ರಚಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪೂರ್ವಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿಯೂ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ಆಯೋಜಿಸಿ, ಶಾಸಕರು, ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರೊಂದಿಗೆ ಮುಂದಿನ ರಾಜಕೀಯ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಶೀಲ್ ಜಿ. ನಮೋಶಿ ಅವರ ತಾಯಿ ನಿಧನರಾದ ಸುದ್ದಿ ತೀವ್ರ ದುಃಖ ತಂದಿದೆ. ಈ ಕಾರಣದಿಂದ ಅವರು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಅ.5ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಲೆಕ್ಕಿಹಾಳ ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಮಾತನಾಡಿ, ಈಶಾನ್ಯ ಭಾಗದ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಜೆಡಿಎಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಕೈಜೋಡಿಸಲಿದ್ದಾರೆ. ಜೆಡಿಎಸ್ ರಾಜ್ಯ ನಾಯಕತ್ವ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದಂತೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಮೈತ್ರಿ ಅಭ್ಯರ್ಥಿಗಳ ಪರ ಸಂಘಟಿತವಾಗಿ ಕೆಲಸ ಮಾಡಲಾಗುವುದು ಎಂದರು.
ಇದೇ ವೇಳೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಆಕಾಂಕ್ಷಿಯಾಗಿರುವುದಾಗಿ ವಿರೂಪಾಕ್ಷಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಂತೇಶ ಅತನೂರ್, ರವೀಂದ್ರ ಜಾಲ್ದಾರ್, ರಾಮಕೃಷ್ಣ, ಜಂಬಣ್ಣ ನೀಲಗಲ್, ಶಿವಶಂಕರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.



