ರಾಯಚೂರು: ಕರ್ನಾಟಕದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪಟ್ಟಿಯಿಂದ ಕೈಬಿಡುವಂತೆ ಕೋರಿ ನಡೆಸುತ್ತಿರುವ ಕಾನೂನು ಹೋರಾಟ ಮುಂದುವರಿದಿದ್ದು, ಈ ಸಂಬಂಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಮಿತ್ರ ವಕೀಲರು, ಮಾರುತಿರಾವ್ ಜಂಬಗಾ, ಕೃಷ್ಣ ಸಿ.ಎಂ. ಹಾಗೂ ತಮ್ಮ ನೇತೃತ್ವದಲ್ಲಿ 2019ರ ಮೇ 14ರಂದು ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡುವಂತೆ ಕೋರಿ ಸಂವಿಧಾನದ ಅನುಚ್ಛೇದ 32ರಡಿ ಸುಪ್ರೀಂ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು ಎಂದು ಹೇಳಿದರು.
2020ರ ಫೆಬ್ರವರಿ 14ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಲ್ಕು ವಾರಗಳೊಳಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಫೆಬ್ರವರಿ 27ರಂದು ಆಯೋಗಕ್ಕೆ ಮನವಿ ಸಲ್ಲಿಸಲಾಗಿತ್ತು. ನಂತರ ಆಯೋಗವು ಕರ್ನಾಟಕ ಸರ್ಕಾರದಿಂದ ಅಗತ್ಯ ಶಿಫಾರಸು ಮತ್ತು ಮಾಹಿತಿಯನ್ನು ಪಡೆಯುವ ಸಂಬಂಧ ಕ್ರಮ ಕೈಗೊಂಡಿತ್ತು ಎಂದು ವಿವರಿಸಿದರು.
2020ರ ಮಾರ್ಚ್ 12 ಹಾಗೂ ಮೇ 14ರಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಈ ವಿಷಯಕ್ಕೆ ಸಂಬಂಧಿಸಿದ ಶಿಫಾರಸನ್ನು ತ್ವರಿತವಾಗಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ 2023ರ ಫೆಬ್ರವರಿ 16ರಂದು ರಾಜ್ಯದ ಮುಖ್ಯ ಕಾರ್ಯದರ್ಶಿಗಳು ನಾಲ್ಕು ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿಯೇ ಮುಂದುವರಿಸುವ ನಿಲುವನ್ನು ಆಯೋಗಕ್ಕೆ ತಿಳಿಸಿದ್ದರು ಎಂದು ಮಹೇಂದ್ರ ಕುಮಾರ್ ಮಿತ್ರ ಆರೋಪಿಸಿದರು.
ಇದನ್ನು ಪ್ರಶ್ನಿಸಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿದ್ದು, ಹೈಕೋರ್ಟ್ನಲ್ಲಿ ಪರಿಹಾರ ಕಂಡುಕೊಳ್ಳುವಂತೆ ಸಲಹೆ ದೊರೆತ ಹಿನ್ನೆಲೆಯಲ್ಲಿ 2023ರ ಅಕ್ಟೋಬರ್ 25ರಂದು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಯಿತು. 2024ರ ಏಪ್ರಿಲ್ 4ರಂದು ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು ಎಂದು ತಿಳಿಸಿದರು.
2026ರ ಸೆಪ್ಟೆಂಬರ್ 30ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ತಮ್ಮ ಬೇಡಿಕೆಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬುದು ತಮ್ಮ ನಿರೀಕ್ಷೆಯಾಗಿದ್ದು, ಈ ಸಂಬಂಧ ಕಾನೂನು ಹೋರಾಟವನ್ನು ಮುಂದುವರಿಸಲಾಗುವುದು ಎಂದು ಮಹೇಂದ್ರ ಕುಮಾರ್ ಮಿತ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಜನತಾ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಹುಸೇನ್ ಬಾಷಾ ಪಲಕನಮರಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.



