ಗಬ್ಬೂರು, ಅ.5: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ದೇವದುರ್ಗ ತಾಲೂಕಿನ ಗಬ್ಬೂರಿನ ಎಸ್ಎಲ್ಡಿ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನ ರಾಷ್ಟ್ರಧ್ವಜದ ಮಹತ್ವ, ಎಚ್ಐವಿ–ಏಡ್ಸ್ ಜಾಗೃತಿ ಹಾಗೂ ಕೃಷಿಯ ಮಹತ್ವ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಮುಂಜಾನೆ ‘ರಾಷ್ಟ್ರಧ್ವಜ ಕಟ್ಟುವುದು, ರಾಷ್ಟ್ರಗೀತೆ ಮತ್ತು ವಂದೇ ಮಾತರಂ’ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದ್ದ ಭಾರತೀಯ ಸೇವಾದಳದ ಸಂಚಾಲಕ ವಿದ್ಯಾಸಾಗರ ಚಿಮಣಿಗೆರೆ ಮಾತನಾಡಿ, ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ, ಏಕತೆ ಮತ್ತು ರಾಷ್ಟ್ರೀಯ ಗೌರವದ ಪ್ರತೀಕವಾಗಿದೆ. ರಾಷ್ಟ್ರಧ್ವಜವನ್ನು ಗೌರವದಿಂದ ಹಾರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಧ್ವಜಾರೋಹಣ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಿರಬೇಕು ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಶಿಕುಮಾರ್ ಮಾತನಾಡಿ, ರಾಷ್ಟ್ರಧ್ವಜದ ಗೌರವ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಪಡೆದ ಜ್ಞಾನವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಡಾ. ಮಂಜುನಾಥ ಪಾಟೀಲ ವಟಗಲ ಮಾತನಾಡಿ, ರಾಷ್ಟ್ರಧ್ವಜ ನಮ್ಮ ದೇಶದ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಶಿಕ್ಷಣಾರ್ಥಿಗಳು ರಾಷ್ಟ್ರೀಯ ಏಕತೆ, ಶಿಸ್ತು ಹಾಗೂ ದೇಶಪ್ರೇಮದ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ರಾಯಭಾರಿಗಳಾಗಬೇಕು ಎಂದು ಕರೆ ನೀಡಿದರು.
ಎಚ್ಐವಿ–ಏಡ್ಸ್ ಕುರಿತು ಜಾಗೃತಿ ಜಾಥಾ
ಬೆಳಿಗ್ಗೆ 11 ಗಂಟೆಗೆ ಎನ್ಎಸ್ಎಸ್ ಪ್ರಶಿಕ್ಷಣಾರ್ಥಿಗಳಿಂದ ಎಚ್ಐವಿ–ಏಡ್ಸ್ ಜಾಗೃತಿ ಜಾಥಾ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರಶಿಕ್ಷಣಾರ್ಥಿಗಳು ಘೋಷಣೆಗಳು ಹಾಗೂ ಜಾಗೃತಿ ಸಂದೇಶಗಳ ಮೂಲಕ ಎಚ್ಐವಿ ಸೋಂಕಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಎಚ್ಐವಿ–ಏಡ್ಸ್ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು, ಸೋಂಕು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡುವುದು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸುವುದು ಜಾಥಾದ ಉದ್ದೇಶವಾಗಿತ್ತು.
ಸಂಜೆ ‘ಪ್ರಸ್ತುತ ದಿನಗಳಲ್ಲಿ ಕೃಷಿಯ ಮಹತ್ವ’ ವಿಷಯದ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ದೇವೇಂದ್ರಪ್ಪ ಗಾದಗೋಪಾಳಪುರ ಮಾತನಾಡಿ, ಕೃಷಿಯು ಭಾರತದ ಆರ್ಥಿಕ ವ್ಯವಸ್ಥೆಯ ಪ್ರಮುಖ ಆಧಾರವಾಗಿದೆ. ಆಹಾರ ಉತ್ಪಾದನೆಯ ಜೊತೆಗೆ ಕೋಟ್ಯಂತರ ಜನರಿಗೆ ಉದ್ಯೋಗ ಹಾಗೂ ಜೀವನೋಪಾಯ ಒದಗಿಸುತ್ತಿರುವ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಮತ್ತಷ್ಟು ಲಾಭದಾಯಕವಾಗಿಸಬೇಕು. ಯುವಜನರು ಕೃಷಿಯತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿ, ಅಖಿಲ ಭಾರತ ವೀರಶೈವ ಸದಸ್ಯ ಸಚಿನ್ ಪಾಟೀಲ ಮಾತನಾಡಿ, ರೈತರು ದೇಶದ ಬೆನ್ನೆಲುಬಾಗಿದ್ದು, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.
ಕಲ್ಲಯ್ಯಸ್ವಾಮಿ ಮಾತನಾಡಿ, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ಪಾದನೆ ಪಡೆಯುವ ವಿಧಾನಗಳತ್ತ ರೈತರು ಗಮನಹರಿಸಬೇಕು ಎಂದರು. ಆನಂದ ಕುಮಾರ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶದ ಅಭಿವೃದ್ಧಿಯು ಕೃಷಿ ಕ್ಷೇತ್ರದ ಪ್ರಗತಿಯೊಂದಿಗೆ ನೇರ ಸಂಬಂಧ ಹೊಂದಿದ್ದು, ಕೃಷಿಯನ್ನು ಉಳಿಸಿ ಬೆಳೆಸುವುದರಿಂದ ದೇಶದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಬಲ ದೊರೆಯುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಎಚ್.ಸಿ.ಎಂ.ಎಸ್.ಕೆ. ಪದವಿ ಮಹಾವಿದ್ಯಾಲಯದ ಅಧ್ಯಕ್ಷ ಕೆ. ಶರಣರೆಡ್ಡಿ ಮಾತನಾಡಿ, ಕೃಷಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ರೈತರ ಪರಿಶ್ರಮದಿಂದಲೇ ಸಮಾಜಕ್ಕೆ ಆಹಾರ ದೊರೆಯುತ್ತಿದೆ. ವಿದ್ಯಾರ್ಥಿಗಳು ಕೃಷಿಯ ಮಹತ್ವ ಅರಿತು ರೈತರ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು. ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮಗಳಲ್ಲಿ ಡಾ. ಸಿದ್ದರಾಮಯ್ಯ ಹಿರೇಮಠ, ವೀರನಗೌಡ, ಉತ್ತಪ್ಪ ಕೆ., ಪ್ರವೀಣ ಕುಮಾರ, ಶರಣಮ್ಮ, ಹಂಪಮ್ಮ, ಮಾಧುರಿ, ಈರಪ್ಪ ಸರ್ಜಾಪುರ, ಉಪನ್ಯಾಸಕರು, ಎನ್ಎಸ್ಎಸ್ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಹಾಗೂ ಗಬ್ಬೂರು ಗ್ರಾಮಸ್ಥರು ಉಪಸ್ಥಿತರಿದ್ದರು.



