ಮಂತ್ರಾಲಯ: ಶ್ರೀಕ್ಷೇತ್ರ ಮಂತ್ರಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಪವಿತ್ರ ‘ಪರಿಮಳ ಪ್ರಸಾದ’ಕ್ಕೆ ಬೇಡಿಕೆಯೂ ಗಣನೀಯವಾಗಿ ಏರಿಕೆಯಾಗಿದ್ದು, ಭಕ್ತರ ಬೇಡಿಕೆಗೆ ಅನುಗುಣವಾಗಿ ಪ್ರಸಾದ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಶ್ರೀಮಠದಿಂದ ಬೃಹತ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದು, ಭಕ್ತರಿಗೆ ವಿತರಿಸಲಾಗುವ ಪರಿಮಳ ಪ್ರಸಾದಕ್ಕೂ ಹೆಚ್ಚಿನ ಬೇಡಿಕೆ ಉಂಟಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಪರಿಮಳ ಪ್ರಸಾದದ ಉತ್ಪಾದನಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುವ ಉದ್ದೇಶದಿಂದ ನೂತನ ಘಟಕ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಯೋಜನೆಗೆ ಸಂಬಂಧಿಸಿದ ಪ್ರಮುಖ ಸಿವಿಲ್ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನೂತನ ಘಟಕ ಕಾರ್ಯಾರಂಭಕ್ಕೆ ಸಜ್ಜಾಗುತ್ತಿದೆ. ಉಳಿದ ಅಗತ್ಯ ಸಿದ್ಧತೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಘಟಕ ಸಂಪೂರ್ಣವಾಗಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ನೂತನ ಘಟಕ ಕಾರ್ಯಾರಂಭ ಮಾಡಿದ ಬಳಿಕ ಪರಿಮಳ ಪ್ರಸಾದವನ್ನು ಹೆಚ್ಚಿನ ಪ್ರಮಾಣದಲ್ಲಿ ತಯಾರಿಸಲು ಸಾಧ್ಯವಾಗಲಿದ್ದು, ಮಂತ್ರಾಲಯಕ್ಕೆ ಆಗಮಿಸುವ ಭಕ್ತರ ಹೆಚ್ಚುತ್ತಿರುವ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸಲು ಶ್ರೀಮಠಕ್ಕೆ ಅನುಕೂಲವಾಗಲಿದೆ.

ಯೋಜನೆಯ ಕಾಮಗಾರಿಗಳ ಪ್ರಗತಿ ಹಾಗೂ ನೂತನ ಘಟಕದಲ್ಲಿನ ಸಿದ್ಧತೆಗಳನ್ನು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಖುದ್ದಾಗಿ ಪರಿಶೀಲಿಸುತ್ತಿದ್ದಾರೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಘಟಕವನ್ನು ಆದಷ್ಟು ಬೇಗ ಕಾರ್ಯಾರಂಭಗೊಳಿಸಲು ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ.