ರಾಯಚೂರು, ಅ.6: ಉದ್ಯೋಗಕ್ಕಾಗಿ ಹುಟ್ಟೂರು ತೊರೆದು ಬೆಂಗಳೂರಿನಲ್ಲಿ ನೆಲೆಸಿದ್ದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಕುಟುಂಬವೊಂದು ಸಿಲಿಂಡರ್ ಸ್ಫೋಟದಿಂದ ಭೀಕರ ದುರಂತಕ್ಕೊಳಗಾಗಿದ್ದು, ಪತಿ-ಪತ್ನಿ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರಕಿಸಲು ಜಿಲ್ಲೆಯ ಜನಪ್ರತಿನಿಧಿಗಳು ನೆರವಿಗೆ ಧಾವಿಸಬೇಕು ಎಂದು ಕುಟುಂಬದ ಸಂಬಂಧಿಕರು ಮನವಿ ಮಾಡಿದ್ದಾರೆ.
ಬೆಂಗಳೂರು ನಗರದ ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್ನಲ್ಲಿ ಅಕ್ಟೋಬರ್ 3ರಂದು ಈ ಘಟನೆ ಸಂಭವಿಸಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹೊಕ್ರಾಣಿ ಗ್ರಾಮದ ಕರಿಲಿಂಗಪ್ಪ (40), ಅವರ ಪತ್ನಿ ಲಕ್ಷ್ಮಮ್ಮ ಹಾಗೂ ಮಕ್ಕಳಾದ ಚೈತ್ರ, ಬಸವನಗೌಡ, ಗೀತಾ ಮತ್ತು ಗಿರಿಜಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ಬಳಿಕ ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಲಕ್ಷ್ಮಮ್ಮ ಹಾಗೂ ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಉದ್ಯೋಗ ಅರಸಿ ಬೆಂಗಳೂರಿಗೆ ತೆರಳಿದ್ದ ಕರಿಲಿಂಗಪ್ಪ, ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ಎಐ)ದಲ್ಲಿ ದಿನಗೂಲಿ ಆಧಾರದಲ್ಲಿ ಗಾರ್ಡನಿಂಗ್ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ನಾಲ್ವರು ಮಕ್ಕಳೊಂದಿಗೆ ನಾಯಂಡಹಳ್ಳಿಯ ವಿನಾಯಕ ಲೇಔಟ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಇಡೀ ಕುಟುಂಬವೇ ಗಾಯಗೊಂಡಿದೆ.
ಕಳೆದ ಕೆಲವು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಇನ್ನಷ್ಟು ಉತ್ತಮ ಮತ್ತು ವಿಶೇಷ ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ಕುಟುಂಬದ ಸಂಬಂಧಿಕರು ಹೇಳಿದ್ದಾರೆ. ಕುಟುಂಬದ ಆರ್ಥಿಕ ಪರಿಸ್ಥಿತಿಯೂ ದುರ್ಬಲವಾಗಿರುವುದರಿಂದ ಮುಂದಿನ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಕ್ಷೇತ್ರದ ಶಾಸಕರು, ಲೋಕಸಭಾ ಸದಸ್ಯರು ಹಾಗೂ ಜಿಲ್ಲೆಯ ಇತರ ಜನಪ್ರತಿನಿಧಿಗಳು ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ನೆರವು ಒದಗಿಸಬೇಕು. ವೈದ್ಯಕೀಯ ವ್ಯವಸ್ಥೆಯೊಂದಿಗೆ ಸಮನ್ವಯ ಸಾಧಿಸಿ ಗುಣಮಟ್ಟದ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಮನವಿ ಮಾಡಿದ್ದಾರೆ.
ಸಮಾಜ ಸೇವಕರು ಹಾಗೂ ದಾನಿಗಳೂ ಸಂಕಷ್ಟದಲ್ಲಿರುವ ಕುಟುಂಬದ ನೆರವಿಗೆ ಮುಂದಾಗಬೇಕು. ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿರುವ ಈ ದುರ್ಘಟನೆಯಿಂದ ಕುಟುಂಬದ ಬಂಧುಗಳು ಆತಂಕದಲ್ಲಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲು ಅಗತ್ಯ ಸಹಾಯ ದೊರೆಯಲಿ ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.



