ರಾಯಚೂರು: ಗ್ರಾಮೀಣ ಪ್ರದೇಶದ ಜನರಿಗೆ ಸಮಯೋಚಿತ, ಗುಣಮಟ್ಟದ ಹಾಗೂ ಮಾನವೀಯ ಆರೋಗ್ಯ ಸೇವೆ ದೊರೆಯಬೇಕು ಎಂಬುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಮಟಮಾರಿ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಕಾರ್ಯನಿರ್ವಹಣೆ, ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಲಭ್ಯವಿರುವ ಆರೋಗ್ಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಬಳಿಕ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಭೆ ನಡೆಸಿ, ರೋಗಿಗಳ ಚಿಕಿತ್ಸೆಗೆ ಮೊದಲ ಆದ್ಯತೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ವಿಳಂಬವಿಲ್ಲದೆ ಸ್ಪಂದಿಸಬೇಕು. ಆರೋಗ್ಯ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ರೋಗಿಯೊಂದಿಗೆ ಮಾನವೀಯವಾಗಿ ವರ್ತಿಸಿ, ಅಗತ್ಯ ಚಿಕಿತ್ಸೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.
ಆರೋಗ್ಯ ಕೇಂದ್ರಕ್ಕೆ ನೂತನವಾಗಿ ಒದಗಿಸಲಾದ ಆಂಬ್ಯುಲೆನ್ಸ್ನನ್ನೂ ಪರಿಶೀಲಿಸಿದ ಶಾಸಕರು, ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲು ಈ ಸೌಲಭ್ಯ ಮಹತ್ವದ ಪಾತ್ರ ವಹಿಸಲಿದೆ. ಮಟಮಾರಿ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೂ ಇದರ ಪ್ರಯೋಜನ ದೊರೆಯಬೇಕು ಎಂದು ಹೇಳಿದರು.
ಗ್ರಾಮೀಣ ಭಾಗದ ಜನರು ಸಣ್ಣ ಆರೋಗ್ಯ ಸಮಸ್ಯೆಗಳಿಗೂ ದೂರದ ನಗರಗಳಿಗೆ ತೆರಳಬೇಕಾದ ಪರಿಸ್ಥಿತಿ ಎದುರಾಗಬಾರದು. ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲೇ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಸೌಕರ್ಯಗಳು ಸಮರ್ಪಕವಾಗಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದರು.
ಮಟಮಾರಿ ಆರೋಗ್ಯ ಕೇಂದ್ರವು ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ವಿಶ್ವಾಸಾರ್ಹ ಆರೋಗ್ಯ ಸೇವಾ ಕೇಂದ್ರವಾಗಿ ರೂಪುಗೊಳ್ಳಬೇಕು. ಅಗತ್ಯ ಮೂಲಸೌಕರ್ಯ, ವೈದ್ಯಕೀಯ ಸೌಲಭ್ಯ ಹಾಗೂ ತ್ವರಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದರು.



