ದೇವದುರ್ಗ: ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿ ನಿಯಮಾನುಸಾರ ಕೆಲಸ ಮಾಡುವಂತೆ ಸೂಚಿಸಿದ್ದ ಅಧಿಕಾರಿಯನ್ನು ರಾಜಕೀಯ ಒತ್ತಡದ ಮೂಲಕ ವರ್ಗಾವಣೆ ಮಾಡಿಸಲಾಗಿದೆ ಎಂದು ಆರೋಪಿಸಿರುವ ಮಾದಿಗ ಸಮಾಜದ ಮುಖಂಡರು, ವರ್ಗಾವಣೆ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ ತಾಲೂಕು ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ಸಮಾಜದ ಮುಖಂಡ ಯಲ್ಲಪ್ಪ ಆಲ್ದರ್ತಿ, ಮದರಕಲ್ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ಮೇಲಾಧಿಕಾರಿ ವೆಂಕಟೇಶ್ ಗಲಗ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ್ದರು ಎಂದು ತಿಳಿಸಿದರು.

ಆದರೆ, ಅಧಿಕಾರಿಯ ಈ ಕ್ರಮದಿಂದ ಅಸಮಾಧಾನಗೊಂಡ ಗುತ್ತಿಗೆದಾರ ಶರಣಗೌಡ ಪಾಟೀಲ್ ಮದರಕಲ್ ಅವರು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಮೂಲಕ ರಾಜಕೀಯ ಒತ್ತಡ ಹೇರಿ ವೆಂಕಟೇಶ್ ಗಲಗ ಅವರನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡಿಸಿದ್ದಾರೆ ಎಂದು ಮುಖಂಡರು ಆರೋಪಿಸಿದರು.

ಕಾಮಗಾರಿ ಸಂಪೂರ್ಣಗೊಳ್ಳುವ ಮುನ್ನವೇ ಗುತ್ತಿಗೆದಾರರ ಬಿಲ್‌ಗಳನ್ನು ಮಂಜೂರು ಮಾಡಿ ಪಾವತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೂ ಇದೆ. ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಂಡು ಗುಣಮಟ್ಟ ಪರಿಶೀಲನೆ ನಡೆಯುವವರೆಗೆ ಯಾವುದೇ ಬಿಲ್ ಪಾವತಿಸಬಾರದು ಎಂದು ಅವರು ಒತ್ತಾಯಿಸಿದರು.

ಗುತ್ತಿಗೆದಾರರು ರಾಜಕೀಯ ಪ್ರಭಾವ ಬಳಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ ಎಂಬ ಆರೋಪವನ್ನೂ ಮುಖಂಡರು ಮಾಡಿದರು. ಈ ಕುರಿತು ಸರ್ಕಾರ ಮತ್ತು ಸಂಬಂಧಪಟ್ಟ ಉನ್ನತಾಧಿಕಾರಿಗಳು ನಿಷ್ಪಕ್ಷಪಾತವಾಗಿ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ ಕಾರಣಕ್ಕೆ ವರ್ಗಾವಣೆಗೊಂಡಿದ್ದಾರೆ ಎನ್ನಲಾದ ವೆಂಕಟೇಶ್ ಗಲಗ ಅವರ ವರ್ಗಾವಣೆ ಆದೇಶವನ್ನು ತಕ್ಷಣ ರದ್ದುಪಡಿಸಬೇಕು. ಮದರಕಲ್ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಯ ಗುಣಮಟ್ಟದ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕು ಹಾಗೂ ಕಾಮಗಾರಿ ಪೂರ್ಣಗೊಂಡು ಗುಣಮಟ್ಟ ದೃಢೀಕರಣವಾಗುವವರೆಗೆ ಬಿಲ್ ಪಾವತಿಸಬಾರದು ಎಂದು ಮುಖಂಡರು ಒತ್ತಾಯಿಸಿದರು.

ಸರ್ಕಾರ ಹಾಗೂ ಉನ್ನತಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.