ರಾಯಚೂರು: ರಾಜ್ಯದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಗುರುತಿಸುವ ಉದ್ದೇಶದಿಂದ ನಡೆಸಲಾದ ಜಾತಿಗಣತಿ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸಾರ್ವಜನಿಕಗೊಳಿಸಿ, ಅದರಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಲು ನಿಖರವಾದ ಅಂಕಿಅಂಶಗಳು ಅತ್ಯಂತ ಮುಖ್ಯವಾಗಿವೆ. ಆದರೆ ಕಳೆದ ಹಲವು ವರ್ಷಗಳಿಂದ ವಿವಿಧ ಆಯೋಗಗಳ ಮೂಲಕ ಸಮೀಕ್ಷೆಗಳನ್ನು ನಡೆಸಿ ವರದಿಗಳನ್ನು ಸಿದ್ಧಪಡಿಸಿದ್ದರೂ ಅವುಗಳ ಶಿಫಾರಸುಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.

2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಎಲ್ಲ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲು ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗಕ್ಕೆ ಜವಾಬ್ದಾರಿ ವಹಿಸಿತ್ತು. ಸುಮಾರು 5.60 ಕೋಟಿ ಜನರ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ 1.25 ಲಕ್ಷ ಸರ್ಕಾರಿ ಸಿಬ್ಬಂದಿ ಹಾಗೂ 30 ಸಾವಿರ ಮೇಲ್ವಿಚಾರಕರನ್ನು ನಿಯೋಜಿಸಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಈ ಸಮೀಕ್ಷೆಯ ವರದಿ 2017ರಲ್ಲಿ ಅಂತಿಮಗೊಂಡಿದ್ದರೂ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ತಿಳಿಸಿದರು.

ನಂತರ ಅಧಿಕಾರಕ್ಕೆ ಬಂದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರಗಳು ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವಲ್ಲಿ ಆಸಕ್ತಿ ತೋರಲಿಲ್ಲ. ಇದರಿಂದ ಹಿಂದುಳಿದ ಮತ್ತು ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು.

2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಂತರಾಜ ಆಯೋಗದ ವರದಿಯನ್ನು ಅಂಗೀಕರಿಸಿ ಶಿಫಾರಸುಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಈ ಭರವಸೆಯನ್ನು ನಂಬಿ ಅಹಿಂದ ಸಮುದಾಯಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದವು. ಆದರೆ ಸರ್ಕಾರ ರಚನೆಯಾದ ನಂತರವೂ ವರದಿಯ ಅನುಷ್ಠಾನ ವಿಳಂಬವಾಗಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದರು.

ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ಹಿಂದಿನ ಸಮೀಕ್ಷೆಯ ದತ್ತಾಂಶಗಳನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಕೆಲವು ಪ್ರಬಲ ಸಮುದಾಯಗಳು ಸಮೀಕ್ಷೆಯ ವೈಜ್ಞಾನಿಕತೆ ಹಾಗೂ ಮಾಹಿತಿ ಸಂಗ್ರಹಣೆಯ ವಿಧಾನಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದವು. ಮನೆಮನೆಗೆ ಭೇಟಿ ನೀಡದೆ ಸಮೀಕ್ಷೆ ನಡೆಸಲಾಗಿದೆ ಎಂಬ ಆರೋಪಗಳನ್ನು ಮುಂದಿಟ್ಟು ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಈ ಒತ್ತಡಕ್ಕೆ ಮಣಿದು ಸರ್ಕಾರ ವರದಿಯನ್ನು ಕೈಬಿಟ್ಟಿದೆ ಎಂದು ಹನುಮಂತಪ್ಪ ಆರೋಪಿಸಿದರು.

ಹಿಂದಿನ ಸಮೀಕ್ಷೆಯ ದತ್ತಾಂಶ ಹಳೆಯದಾಗಿದೆ ಎಂಬ ಕಾರಣ ನೀಡಿ ಮತ್ತೊಮ್ಮೆ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಯಿತು. ಮಧುಸೂದನ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸುಮಾರು 435 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರ ತೆರಿಗೆ ಹಣವನ್ನು ದೊಡ್ಡ ಪ್ರಮಾಣದಲ್ಲಿ ಖರ್ಚು ಮಾಡಿ ಸಿದ್ಧಪಡಿಸಿರುವ ಸಮೀಕ್ಷಾ ವರದಿಯ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಮೀಕ್ಷೆಯ ಉದ್ದೇಶವೇ ಹಿಂದುಳಿದ ಸಮುದಾಯಗಳ ನೈಜ ಸ್ಥಿತಿಗತಿಗಳನ್ನು ಗುರುತಿಸಿ ಅವರಿಗೆ ನ್ಯಾಯಯುತ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಆದರೆ ವರದಿಯ ಮಾಹಿತಿಯನ್ನು ಬಹಿರಂಗಪಡಿಸದೆ ಗೌಪ್ಯವಾಗಿಡುವುದು ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಹಿಂದುಳಿದ ಸಮುದಾಯಗಳು ಶಿಕ್ಷಣ, ಉದ್ಯೋಗ, ಆರ್ಥಿಕ ಅವಕಾಶಗಳು ಹಾಗೂ ಸಾಮಾಜಿಕ ಪ್ರಾತಿನಿಧ್ಯದ ವಿಚಾರದಲ್ಲಿ ಇಂದಿಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಇಂತಹ ಸಮುದಾಯಗಳ ಅಭಿವೃದ್ಧಿಗೆ ಸಮರ್ಪಕ ಯೋಜನೆಗಳನ್ನು ರೂಪಿಸಲು ಸಮೀಕ್ಷೆಯ ದತ್ತಾಂಶಗಳು ನೆರವಾಗಲಿವೆ. ಆದ್ದರಿಂದ ಸರ್ಕಾರ ಯಾವುದೇ ಸಮುದಾಯದ ಒತ್ತಡಕ್ಕೆ ಒಳಗಾಗದೆ ವರದಿಯ ಅಂಶಗಳನ್ನು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.

ಜಾತಿಗಣತಿ ವಿಚಾರವನ್ನು ರಾಜಕೀಯ ಲಾಭನಷ್ಟದ ದೃಷ್ಟಿಯಿಂದ ನೋಡದೆ ಸಾಮಾಜಿಕ ನ್ಯಾಯದ ದೃಷ್ಟಿಕೋನದಿಂದ ಪರಿಗಣಿಸಬೇಕು. ಸಮೀಕ್ಷೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರುವ ಸರ್ಕಾರ ಅದರ ಫಲಿತಾಂಶವನ್ನು ಜನತೆಗೆ ತಿಳಿಸುವ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವರದಿಯಲ್ಲಿರುವ ಶಿಫಾರಸುಗಳನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಕೂಡಲೇ ಸಮೀಕ್ಷಾ ವರದಿಯ ದತ್ತಾಂಶಗಳನ್ನು ಬಹಿರಂಗಪಡಿಸಿ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಿವಿಧ ಹಿಂದುಳಿದ ಜಾತಿಗಳ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅವರಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯಾಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ, ನಾರಾಯಣ, ವೆಂಕಟೇಶ ಮಡಿವಾಳ, ಆಂಜನೇಯ, ಬಿ ಬಸವರಾಜ್, ಗಾಯತ್ರಿ, ಸುರೇಖಾ, ಅಂಜಲಿ, ನರಸಿಂಹ, ವಿಜಯ್ ಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.