ರಾಯಚೂರು, ಅ.7: ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಅಭಿಯಾನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ನಿತ್ಯದ ಜೀವನದ ಅವಿಭಾಜ್ಯ ಅಂಗವಾಗಬೇಕು. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕಾಯಕಲ್ಪ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ‘ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಸಾಂಸ್ಥಿಕಗೊಳಿಸುವುದು’ ಅಭಿಯಾನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೇಶಸೇವೆ, ಸರಳತೆ, ಶಿಸ್ತು ಮತ್ತು ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಚ್ಛತೆಯ ಮಹತ್ವವನ್ನು ಅರಿತು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸಬೇಕು. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡುವುದು ರೋಗಿಗಳ ಆರೋಗ್ಯ ರಕ್ಷಣೆ ಹಾಗೂ ಸೋಂಕು ಹರಡುವುದನ್ನು ತಡೆಗಟ್ಟುವ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಆಸ್ಪತ್ರೆಗಳ ಒಳಾಂಗಣ, ಹೊರಾಂಗಣ, ರೋಗಿಗಳ ವಾರ್ಡ್ಗಳು, ಕಚೇರಿಗಳು, ಶೌಚಾಲಯಗಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತ್ಯಾಜ್ಯವನ್ನು ನಿಗದಿತ ಬಣ್ಣಗಳ ತ್ಯಾಜ್ಯ ಸಂಗ್ರಹಣಾ ಡಬ್ಬಿಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ, ಸುರಕ್ಷಿತ ವಿಧಾನದಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಆಸ್ಪತ್ರೆಗಳಿಗೆ ಆಗಮಿಸುವ ರೋಗಿಗಳು ಹಾಗೂ ಅವರ ಸಂಬಂಧಿಕರು ಸ್ವಚ್ಛತೆ ಕಾಪಾಡುವಲ್ಲಿ ಸಹಕರಿಸಬೇಕು. ಆಹಾರ ಪದಾರ್ಥಗಳ ಉಳಿಕೆ, ಹಸಿ ಕಸ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ನಿಗದಿತ ಸ್ಥಳಗಳಲ್ಲಿ ಹಾಕುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆಸ್ಪತ್ರೆ ಆವರಣದಲ್ಲಿ ಅನಗತ್ಯ ವಸ್ತುಗಳನ್ನು ತೆರವುಗೊಳಿಸುವುದು, ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಹಾಗೂ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸುವುದರ ಜೊತೆಗೆ ಅವುಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದ ದಾಖಲಾತಿಗಳನ್ನು ಕ್ರಮಬದ್ಧವಾಗಿ ನಿರ್ವಹಿಸಲಾಗುತ್ತಿದೆ. ಸ್ವಚ್ಛತಾ ಚಟುವಟಿಕೆಗಳಿಗೆ ನಿರಂತರತೆ ನೀಡುವ ಉದ್ದೇಶದಿಂದ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸ್ವಚ್ಛ ಆಸ್ಪತ್ರೆ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣ ಕೇವಲ ಆರೋಗ್ಯ ಇಲಾಖೆಯ ಜವಾಬ್ದಾರಿಯಲ್ಲ. ಸಾರ್ವಜನಿಕರ ಸಹಭಾಗಿತ್ವವೂ ಅತ್ಯಂತ ಮುಖ್ಯವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆ, ಕೆಲಸದ ಸ್ಥಳ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿದಾಗ ಮಾತ್ರ ಸ್ವಚ್ಛ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಡಾ. ನಂದಿತಾ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ ಕೆ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಕುಮಾರ ನಾರಾ, ಜಿಲ್ಲಾ ಎನ್ವಿಬಿಡಿಸಿಪಿ ಅಧಿಕಾರಿ ಡಾ. ಚಂದ್ರಶೇಖರಯ್ಯ, ಬಾಯಿ ಆರೋಗ್ಯ ನೋಡಲ್ ಅಧಿಕಾರಿ ಡಾ. ಶೀತಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪುಂಡಲೀಕ ಗಂಜಿ, ಕಚೇರಿ ಅಧೀಕ್ಷಕರಾದ ಸುಹಾಸ್, ಸುಧಾರಾಣಿ, ಎನ್ಕ್ಯೂಎಎಸ್ ಜಿಲ್ಲಾ ಸಲಹೆಗಾರ ಹರೀಶ್ ಪತಂಗೆ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶ್ರಮದಾನ ಮಾಡಿದರು.



