ಗಬ್ಬುರು, ಅ.8: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಪಠ್ಯಾಧಾರಿತ ಶಿಕ್ಷಣದ ಜೊತೆಗೆ ಸಮಾಜದ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತವೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಯುವಜನರಲ್ಲಿ ಸೇವಾಭಾವನೆ, ಶಿಸ್ತು, ನಾಯಕತ್ವ ಸಾಮರ್ಥ್ಯ ಹಾಗೂ ಸಮಾಜದ ಬಗೆಗಿನ ಕಾಳಜಿ ವೃದ್ಧಿಯಾಗುತ್ತದೆ ಎಂದು ಗಬ್ಬೂರಿನ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾಶಿವ ಮಠದ ಅಭಿಪ್ರಾಯಪಟ್ಟರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಹಯೋಗದಲ್ಲಿ ಗಬ್ಬೂರು ಗ್ರಾಮದ ಎಸ್‌ಎಲ್‌ಡಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿಯೇ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನಜೀವನ, ಸಮಸ್ಯೆಗಳು ಹಾಗೂ ಸಾಮಾಜಿಕ ಪರಿಸ್ಥಿತಿಗಳನ್ನು ನೇರವಾಗಿ ತಿಳಿದುಕೊಳ್ಳುವುದರಿಂದ ಅವರಲ್ಲಿ ಜವಾಬ್ದಾರಿಯ ಪ್ರಜ್ಞೆ ಮೂಡುತ್ತದೆ. ಎನ್‌ಎಸ್‌ಎಸ್ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಎಸ್‌ಎಲ್‌ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇಸಾಯಿ, ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಗಿರಿ ಮಲ್ಲಪ್ಪ ಕರಡಕಲ್, ಮಹಾವಿದ್ಯಾಲಯದ ಸದಸ್ಯ ಶಿವಕುಮಾರ್ ವೆಂಕಟಾಪುರ, ನಿವೃತ್ತ ಪೊಲೀಸ್ ಅಧಿಕಾರಿ ರಾಜಶೇಖರ, ಆರ್. ವಿರೇಂದ್ರ ಪಾಟೀಲ್ ಹಾಗೂ ಗಬ್ಬೂರಿನ ಹಿರಿಯ ಮುಖಂಡ ದೊಡ್ಡ ಬೂದಯ್ಯ ತಾತ ಸಾಲಿಮಠ ಮಾತನಾಡಿ, ಶಿಬಿರಾರ್ಥಿಗಳು ಗ್ರಾಮಸ್ಥರೊಂದಿಗೆ ನೇರ ಸಂಪರ್ಕ ಸಾಧಿಸಿ ಅವರ ಬದುಕಿನ ವಿವಿಧ ಆಯಾಮಗಳನ್ನು ತಿಳಿದುಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಂಜುನಾಥ ಪಾಟೀಲ ವಟಗಲ್ ಮಾತನಾಡಿ, ಭವಿಷ್ಯದ ಶಿಕ್ಷಕರಾಗಿ ರೂಪುಗೊಳ್ಳುತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಾಮಾಜಿಕ ಅನುಭವ ಅತ್ಯಂತ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆಯಂತಹ ಕಾರ್ಯಕ್ರಮಗಳು ಅವರಲ್ಲಿ ಸಹಕಾರ ಮನೋಭಾವ, ಸಾರ್ವಜನಿಕ ಸೇವೆಯ ಆಸಕ್ತಿ ಹಾಗೂ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಗುಣಗಳನ್ನು ಬೆಳೆಸಲು ನೆರವಾಗುತ್ತವೆ ಎಂದು ಹೇಳಿದರು.

ಶಿಬಿರದ ಸಂಯೋಜಕ ಡಾ. ಸಿದ್ದರಾಮಯ್ಯ ಹಿರೇಮಠ ಶಿಬಿರದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ, ವಿಶೇಷ ಶಿಬಿರದ ಅವಧಿಯಲ್ಲಿ ಗ್ರಾಮ ಸಮೀಕ್ಷೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು, ಯೋಗಾಸನ ಅಭ್ಯಾಸ, ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಎಲ್ಲ ಚಟುವಟಿಕೆಗಳಲ್ಲಿ ಪ್ರಶಿಕ್ಷಣಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಅಶೋಕ ಪಾಟೀಲ್ ಅತ್ತನೂರು ಮಾತನಾಡಿ, ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ಸಮಾಜದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಎನ್‌ಎಸ್‌ಎಸ್ ಶಿಬಿರಗಳು ಯುವಜನರನ್ನು ಸೇವಾನಿಷ್ಠೆ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯುಳ್ಳ ನಾಗರಿಕರನ್ನಾಗಿ ರೂಪಿಸಲು ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶಶಿಕುಮಾರ್, ಉಪನ್ಯಾಸಕರಾದ ವೀರನಗೌಡ ಹೇಮರೆಡ್ಡಿ, ಉತ್ತಪ್ಪ, ಶರಣಮ್ಮ, ಹಂಪಮ್ಮ, ಮಾಧುರಿ, ಪ್ರವೀಣಕುಮಾರ್, ಈರಪ್ಪ ಸರ್ಜಾಪುರ ಸೇರಿದಂತೆ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.