ರಾಯಚೂರು, ಅ.8: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ‘ಇಂಡಿಯಾ’ ಒಕ್ಕೂಟದ ಮುಖಂಡರು ಗುರುವಾರ ನಗರದ ಗಂಜ್ ವೃತ್ತದಲ್ಲಿ ಕಪ್ಪುಪಟ್ಟಿ ಧರಿಸಿ, ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗವು ತನ್ನ ತಟಸ್ಥತೆಯನ್ನು ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ 500ಕ್ಕೂ ಹೆಚ್ಚು ಸಂಸದರು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಲು ಮುಂದಾದ ಸಂಸದರಿಗೆ ಅವಕಾಶ ನೀಡದೆ, ಪೊಲೀಸರ ಮೂಲಕ ಬಲಪ್ರಯೋಗ ನಡೆಸಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆರೋಪಿಸಿದ ಮುಖಂಡರು, ಈ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳಿಗೆ ಸರ್ಕಾರದ ನೀತಿ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಕಾರ್ಯವೈಖರಿಯನ್ನು ಪ್ರಶ್ನಿಸುವ ಹಕ್ಕಿದೆ. ಆದರೆ, ಜನಪ್ರತಿನಿಧಿಗಳ ಧ್ವನಿಯನ್ನು ಹತ್ತಿಕ್ಕಲು ಪೊಲೀಸ್ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ಬೆಳವಣಿಗೆಗಳು ಸಂವಿಧಾನಾತ್ಮಕ ಸಂಸ್ಥೆಗಳ ಮೇಲಿನ ಸಾರ್ವಜನಿಕ ವಿಶ್ವಾಸಕ್ಕೆ ಧಕ್ಕೆ ತರುತ್ತವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿಯೂ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆ ಕಾಪಾಡಲಾಗುತ್ತಿಲ್ಲ ಎಂದು ಆರೋಪಿಸಿದ ಮುಖಂಡರು, ಮತದಾರರ ಹಕ್ಕುಗಳನ್ನು ರಕ್ಷಿಸುವ ಬದಲು ರಾಜಕೀಯ ಹಿತಾಸಕ್ತಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೂರಿದರು.

ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷದ ಪ್ರಭಾವಕ್ಕೆ ಒಳಗಾಗದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಆಯೋಗದ ಮೇಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ತನಿಖೆ ನಡೆಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಕೈಗಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಗಂಜ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರೂ ಮುಂದಾಗಬೇಕೆಂದು ಕರೆ ನೀಡಿದರು.

ಇದೇ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ನೇತಾಜಿ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಈ ಮೆರವಣಿಗೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು, ಸಮಾನ ಮನಸ್ಕರು, ಪ್ರಜಾಪ್ರಭುತ್ವದ ಪರ ಕಾಳಜಿ ಹೊಂದಿರುವ ನಾಗರಿಕರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ ಅಂಗಡಿ, ಅಮರೇಗಿಡ ಅಂಚಿನಾಳ, ಜಯಣ್ಣ, ಶಾಲಾಮ್, ಶ್ರೀನಿವಾಸ್ ರೆಡ್ಡಿ, ಪ್ರತಿಭಾ ರೆಡ್ಡಿ, ನಿರ್ಮಲ ಬೆಣ್ಣೆ, ಶಶಿಕಲಾ, ಸುರೇಖಾ, ಮರಿಸ್ವಾಮಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.