ದೇವದುರ್ಗ, ಅ.8: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಶಿಕ್ಷಣದೊಂದಿಗೆ ಸಮಾಜ ಸೇವೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ವ್ಯಕ್ತಿತ್ವ ಪರಿಪೂರ್ಣವಾಗಿ ರೂಪುಗೊಳ್ಳಲು ಸಾಧ್ಯ ಎಂದು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಅಶೋಕ್ ಪಾಟೀಲ್ ಅತ್ತನೂರು ಹೇಳಿದರು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಹಯೋಗದಲ್ಲಿ ಗಬ್ಬೂರು ಗ್ರಾಮದ ಎಸ್ಎಲ್ಡಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಆಶಯವಾದ ‘ಸೇವೆಯ ಮೂಲಕ ವ್ಯಕ್ತಿತ್ವ ವಿಕಸನ’ ಎಂಬ ತತ್ವವನ್ನು ವಿದ್ಯಾರ್ಥಿಗಳು ಕೇವಲ ಶಿಬಿರದ ಚಟುವಟಿಕೆಗಳಿಗೆ ಸೀಮಿತಗೊಳಿಸದೆ ತಮ್ಮ ದೈನಂದಿನ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಗುಣ, ಪರಸ್ಪರ ಸಹಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗಬ್ಬೂರಿನ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾಶಿವ ಮಠದ ಮಾತನಾಡಿ, ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವವನ್ನು ನೀಡುತ್ತವೆ. ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಅರಿತುಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಹೆಚ್ಚುತ್ತದೆ. ಇಂತಹ ಶಿಬಿರಗಳು ಯುವಜನರಲ್ಲಿ ನಾಯಕತ್ವ ಗುಣ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಎಸ್ಎಲ್ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ದೇಸಾಯಿ ಮಾತನಾಡಿ, ವಿದ್ಯಾರ್ಥಿ ಜೀವನವು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗಬಾರದು. ಸಮಾಜದ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮನೋಭಾವವನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಗಿರಿ ಮಲ್ಲಪ್ಪ ಕರಡಕಲ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ಗ್ರಾಮೀಣ ಬದುಕಿನ ವಾಸ್ತವ ಸ್ಥಿತಿಯನ್ನು ಪರಿಚಯಿಸುವುದರ ಜೊತೆಗೆ ಜನರ ಸಮಸ್ಯೆಗಳನ್ನು ಹತ್ತಿರದಿಂದ ತಿಳಿದುಕೊಳ್ಳಲು ಅವಕಾಶ ಕಲ್ಪಿಸುತ್ತವೆ. ಗ್ರಾಮೀಣ ಸಮುದಾಯದೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ವಿದ್ಯಾರ್ಥಿಗಳಲ್ಲಿ ಸಹಾನುಭೂತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡುತ್ತದೆ ಎಂದು ತಿಳಿಸಿದರು.
ಶಿಕ್ಷಣ ಮಹಾವಿದ್ಯಾಲಯದ ಸದಸ್ಯ ಶಿವಕುಮಾರ್ ವೆಂಕಟಪುರ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ. ಎನ್ಎಸ್ಎಸ್ನಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಹೊಂದಾಣಿಕೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ವೃದ್ಧಿಸುತ್ತವೆ ಎಂದರು.
ಮತ್ತೋರ್ವ ಸದಸ್ಯ ಆರ್. ವೀರೇಂದ್ರ ಪಾಟೀಲ್ ಮಾತನಾಡಿ, ಯುವಜನರು ಸೇವಾ ಮನೋಭಾವವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡು ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಾಗ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಗ್ರಾಮದ ಹಿರಿಯ ಮುಖಂಡ ದೊಡ್ಡ ಬೂದಯ್ಯ ತಾತ ಸಾಲಿಮಠ ಮಾತನಾಡಿ, ಶಿಬಿರದ ಅವಧಿಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಗಬ್ಬೂರು ಗ್ರಾಮದಲ್ಲಿ ವಿವಿಧ ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಮೆಚ್ಚುಗೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳ ಇಂತಹ ಸೇವಾ ಕಾರ್ಯಗಳು ಗ್ರಾಮೀಣ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಯುವಜನರಿಗೆ ಪ್ರೇರಣೆಯಾಗುತ್ತವೆ ಎಂದು ಶ್ಲಾಘಿಸಿದರು.
ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಎಸ್ಎಲ್ಡಿ ಪಬ್ಲಿಕ್ ಶಾಲೆಯ ರಾಜಶೇಖರ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ರೂಢಿಸಿಕೊಳ್ಳಬೇಕು. ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮಾಜದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಂಜುನಾಥ ಪಾಟೀಲ ವಟಗಲ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುವುದರ ಜೊತೆಗೆ ಗ್ರಾಮೀಣ ಪ್ರದೇಶದ ಸಮಸ್ಯೆಗಳು ಹಾಗೂ ಸಾಮಾಜಿಕ ಪರಿಸ್ಥಿತಿಯನ್ನು ಅರಿತುಕೊಳ್ಳಲು ಉತ್ತಮ ಅವಕಾಶ ಕಲ್ಪಿಸಿದೆ. ಶಿಬಿರದಲ್ಲಿ ಪಡೆದ ಅನುಭವವನ್ನು ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿ ಹಾಗೂ ವೈಯಕ್ತಿಕ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿಬಿರದ ಸಂಯೋಜಕ ಡಾ. ಸಿದ್ದರಾಮಯ್ಯ ಹಿರೇಮಠ ಅವರು ವಾರ್ಷಿಕ ವಿಶೇಷ ಶಿಬಿರದ ಉದ್ದೇಶ, ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯ ಕುರಿತು ವಿವರಿಸಿದರು. ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಮತ್ತು ಸೇವಾ ಮನೋಭಾವ ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭದ ಅಂಗವಾಗಿ ಗಬ್ಬೂರಿನ ಎಸ್ಎಲ್ಡಿ ಪಬ್ಲಿಕ್ ಶಾಲೆಯ ಪದಾಧಿಕಾರಿಗಳ ವತಿಯಿಂದ ಶಿಕ್ಷಣ ಮಹಾವಿದ್ಯಾಲಯದ ಪದಾಧಿಕಾರಿಗಳು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಶಶಿಕುಮಾರ್, ಉಪನ್ಯಾಸಕರಾದ ವೀರನಗೌಡ ಹೇಮರೆಡ್ಡಿ, ಉತ್ತಪ್ಪ, ಶರಣಮ್ಮ, ಹಂಪಮ್ಮ, ಮಾಧುರಿ, ಪ್ರವೀಣ ಕುಮಾರ್, ಈರಪ್ಪ ಸರ್ಜಾಪುರ ಸೇರಿದಂತೆ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಹಾಗೂ ಶಾಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



