ದೇವದುರ್ಗ, ಅ.7: ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ರಾಯಚೂರು–ದೇವದುರ್ಗ–ಜಾಲಹಳ್ಳಿ–ವಿಜಯಪುರ ಮಾರ್ಗದಲ್ಲಿ ನೂತನ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಾಲಹಳ್ಳಿ ಪಟ್ಟಣವು ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದ್ದು, 25 ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಪ್ರಸ್ತುತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 33 ಸದಸ್ಯರಿದ್ದು, ಪಟ್ಟಣದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂತೆ, ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಜನಸಂಖ್ಯೆ ಮತ್ತು ಪಟ್ಟಣದ ವ್ಯಾಪ್ತಿ ಹೆಚ್ಚುತ್ತಿರುವುದಕ್ಕೆ ಅನುಗುಣವಾಗಿ ರಸ್ತೆ, ಕುಡಿಯುವ ನೀರು, ಚರಂಡಿ, ಸ್ವಚ್ಛತೆ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಗ್ರಾಮ ಪಂಚಾಯಿತಿಗೆ ದೊರೆಯುವ ಅನುದಾನ ಸಾಕಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಜಾಲಹಳ್ಳಿ ಈ ಹಿಂದೆ ಪಟ್ಟಣ ಪಂಚಾಯಿತಿ ಸ್ಥಾನಮಾನ ಹೊಂದಿದ್ದ ಹಿನ್ನೆಲೆಯಲ್ಲಿ, ಈಗಿನ ಜನಸಂಖ್ಯೆ, ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಹಾಗೂ ಭವಿಷ್ಯದ ಅಭಿವೃದ್ಧಿಯನ್ನು ಪರಿಗಣಿಸಿ ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದೇ ವೇಳೆ ರಾಯಚೂರು–ದೇವದುರ್ಗ–ಜಾಲಹಳ್ಳಿ–ವಿಜಯಪುರ ನಡುವೆ ನೂತನ ರೈಲು ಮಾರ್ಗ ನಿರ್ಮಿಸಲು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ರೈಲು ಮಾರ್ಗ ಸಾಕಾರಗೊಂಡಲ್ಲಿ ದೇವದುರ್ಗ ಮತ್ತು ಜಾಲಹಳ್ಳಿ ಭಾಗದ ಜನರಿಗೆ ದೂರದ ನಗರಗಳಿಗೆ ಸಂಪರ್ಕ ಸುಲಭವಾಗುವುದರ ಜೊತೆಗೆ ವ್ಯಾಪಾರ-ವಾಣಿಜ್ಯ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗಳಿಗೆ ಸಾಗಿಸಲು, ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಹಾಗೂ ಯುವಕರು ಉದ್ಯೋಗಕ್ಕಾಗಿ ಸಂಚರಿಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಪ್ರಸ್ತಾವಿತ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಮೀಕ್ಷೆ, ಕಾರ್ಯಸಾಧ್ಯತಾ ಅಧ್ಯಯನ ಹಾಗೂ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪತ್ರಕರ್ತ ಖಾಜಾ ಹುಸೇನ್ ಬಾಬಾ, ಸ್ಥಳೀಯ ಮುಖಂಡ ಭೀಮಣ್ಣ ಗುಮೇಧಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.