ಲಿಂಗಸುಗೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಮತದಾರರ ಹಕ್ಕುಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ಎಐಸಿಸಿ ನಿರ್ದೇಶನದ ಮೇರೆಗೆ ಗುರುವಾರ ಲಿಂಗಸುಗೂರಿನಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ‘ಕರಾಳ ದಿನ’ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ‘ವೋಟ್ ಚೋರಿ’ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿದರು.
ಮತದಾರರ ಪಟ್ಟಿಯಲ್ಲಿ ನಡೆಯುವ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರುಗಳ ತೆಗೆದುಹಾಕುವಿಕೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳಲ್ಲೂ ಪಾರದರ್ಶಕತೆ ಇರಬೇಕು. ಈ ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಅನುಮಾನಗಳಿಗೆ ಚುನಾವಣಾ ಆಯೋಗ ಸಮರ್ಪಕ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟ ಬೋಸರಾಜು, ಮತದಾರರ ಹಕ್ಕುಗಳ ರಕ್ಷಣೆಗಾಗಿ ಹಾಗೂ ‘ವೋಟ್ ಚೋರಿ’ ಆರೋಪಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ತುರ್ವಿಹಾಳ, ಮಾನ್ವಿ ಶಾಸಕ ಹಂಪಯ್ಯ ನಾಯಕ, ಮಾಜಿ ಶಾಸಕ ಡಿ.ಎಸ್. ಹುಲಗೇರಿ, ಬಸನಗೌಡ ಬಾದರ್ಲಿ, ಜಯಂತರಾವ್ ಪತಂಗೆ, ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



