ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆ ಅ.8ರಂದು ನಡೆಯಿತು.
ಕಾರ್ಯಕ್ರಮವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರೊ. ಡಿ.ಎಂ. ಜ್ಯೋತಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿವೆ. ಅಂತರ ಕಾಲೇಜು ಮಟ್ಟದ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪಕುಲಸಚಿವ ಡಾ. ಕೆ. ವೆಂಕಟೇಶ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡ ಮನೋಭಾವ ಬೆಳೆಸುತ್ತವೆ. ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಕಲಿಸುತ್ತದೆ ಎಂದರು.
ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು, ಅವರಿಗೆ ಇನ್ನಷ್ಟು ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಒದಗಿಸುವುದು ಅಗತ್ಯವಾಗಿದೆ. ಇಂತಹ ಕ್ರೀಡಾ ವೇದಿಕೆಗಳು ವಿದ್ಯಾರ್ಥಿನಿಯರ ಪ್ರತಿಭೆಯನ್ನು ಹೊರತರುವಲ್ಲಿ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಸುಗುಣ ಬಸವರಾಜ ಮಾತನಾಡಿ, ಇಂತಹ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟವನ್ನು ಕಾಲೇಜಿನಲ್ಲಿ ಆಯೋಜಿಸಿರುವುದು ಹೆಮ್ಮೆಯ ಸಂಗತಿ. ವಿವಿಧ ಕಾಲೇಜುಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆಯಾಗುವ ವಿದ್ಯಾರ್ಥಿನಿಯರು ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ಮಾಡಿ ಕಾಲೇಜು ಹಾಗೂ ವಿಶ್ವವಿದ್ಯಾಲಯಕ್ಕೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಸನ್ನಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಯ್ಕೆ ಸಮಿತಿ ಸದಸ್ಯರಾದ ಡಾ. ಜ್ಯೋತಿ ನಾಗೇಂದ್ರಪ್ಪ, ಗಂಗಾಧರ, ಡಾ. ಕಸ್ತೂರಿ ರಜಪುತ ಹಾಗೂ ಸಹ ಪ್ರಾಧ್ಯಾಪಕ ಶರಣಗೌಡ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕರಾದ ಡಾ. ಸೈಯಿದಾ ರಷೀದಾ ಪರವಿನ್, ಡಾ. ಸ್ವರೂಪರಾಣಿ, ಡಾ. ಜ್ಯೋತಿ ಸಿ.ಕೆ., ಸುಮಿತ್ರಾ ಪ್ಯಾಟಿ, ಗ್ರಂಥಪಾಲಕ ಡಾ. ಸುರೇಶ ಎಸ್., ಸಹಾಯಕ ಪ್ರಾಧ್ಯಾಪಕರಾದ ಡಾ. ಸಂತೋಷಕುಮಾರ್ ರೇವೂರ್, ಡಾ. ಅಸ್ಮಾ ಸೇರಿದಂತೆ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಚನ್ನಬಸವ ಕಾರ್ಯಕ್ರಮ ನಿರೂಪಿಸಿದರು. ಪನ್ನಗವೇಣಿ ಪ್ರಾರ್ಥನಾ ಗೀತೆ ಹಾಡಿದರು. ಡಾ. ಉಮಾದೇವಿ ಅತಿಥಿಗಳನ್ನು ಸ್ವಾಗತಿಸಿದರು. ರಂಗನಾಥ ಬಿಲ್ಲಾರ್ ವಂದಿಸಿದರು. ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿನಿಯರು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.



