ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಇಂಡಿಯಾ ಒಕ್ಕೂಟದ ಸಂಸದರು ಗುರುವಾರವೂ ಪ್ರತಿಭಟನೆ ಮುಂದುವರಿಸಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ಮಧ್ಯಾಹ್ನದ ಬಳಿಕ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು. ಚುನಾವಣಾ ಆಯೋಗವು ವಿರೋಧ ಪಕ್ಷಗಳ ಆರೋಪಗಳನ್ನು ನಿರಾಕರಿಸಿದೆ.
ಬಳಿಕ ಇಂಡಿಯಾ ಒಕ್ಕೂಟದ ಸಂಸದರು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಅಲ್ಲಿಯೇ ಕೆಲಕಾಲ ಧರಣಿ ನಡೆಸಿ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ತಮ್ಮ ಹೋರಾಟ ಮುಂದುವರಿಸುವುದಾಗಿ ನಾಯಕರು ತಿಳಿಸಿದರು.
ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಸಂಸದರು ಮತ್ತು ನಾಯಕರು ಪಾಲ್ಗೊಂಡಿದ್ದರು.
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಇದೇ ವಿಷಯವಾಗಿ ವಿರೋಧ ಪಕ್ಷಗಳ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರದ ರಾಜ್ಘಾಟ್ ಪ್ರತಿಭಟನೆಯೊಂದಿಗೆ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿತು.



