ರಾಯಚೂರು, ಅ.9: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತನ್ನ 25 ವರ್ಷಗಳ ಸಾರ್ಥಕ ಪಯಣದ ಬೆಳ್ಳಿ ಮಹೋತ್ಸವವನ್ನು ಕೇವಲ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಜೀವ ಉಳಿಸುವ ಮಹತ್ವದ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅಭಿಪ್ರಾಯಪಟ್ಟರು.
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಹಾಗೂ ರೋಟರಿ ಜನಸೇವಾ ಪ್ರತಿಷ್ಠಾನ ರಕ್ತ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ ಅವರೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂಸ್ಥೆಯೊಂದು ತನ್ನ ಬೆಳ್ಳಿ ಮಹೋತ್ಸವವನ್ನು ಅದ್ಧೂರಿ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತಗೊಳಿಸದೆ, ಸಾರ್ವಜನಿಕರ ಹಿತದೃಷ್ಟಿಯಿಂದ ರಕ್ತದಾನದಂತಹ ಮಾನವೀಯ ಕಾರ್ಯಕ್ಕೆ ಆದ್ಯತೆ ನೀಡಿರುವುದು ಇತರ ಸಂಘಟನೆಗಳಿಗೂ ಮಾದರಿಯಾಗಿದೆ. ಅಪಘಾತ, ತುರ್ತು ಶಸ್ತ್ರಚಿಕಿತ್ಸೆ ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ಅಮೂಲ್ಯ ಜೀವಗಳನ್ನು ಉಳಿಸಬಹುದು. ಈ ನಿಟ್ಟಿನಲ್ಲಿ ಪತ್ರಕರ್ತರು ಕೈಗೊಂಡಿರುವ ಸೇವಾ ಕಾರ್ಯ ಅಭಿನಂದನಾರ್ಹ ಎಂದು ಹೇಳಿದರು.
ಶಾಸಕ ಡಾ. ಶಿವರಾಜ ಪಾಟೀಲ ಮಾತನಾಡಿ, ವೈದ್ಯಕೀಯ ವಿಜ್ಞಾನ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಮಾನವನ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಇಂದಿಗೂ ಸಾಧ್ಯವಾಗಿಲ್ಲ. ಹೀಗಾಗಿ ರಕ್ತದಾನಕ್ಕೆ ಪರ್ಯಾಯವಿಲ್ಲ. ಆರೋಗ್ಯವಂತ ವ್ಯಕ್ತಿಗಳು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೋಗಿಗಳ ಜೀವ ರಕ್ಷಣೆಗೆ ನೆರವಾಗಬೇಕು ಎಂದು ಕರೆ ನೀಡಿದರು.
ರಕ್ತದಲ್ಲಿರುವ ಕೆಂಪು ರಕ್ತಕಣಗಳು, ಪ್ಲೇಟ್ಲೆಟ್ಗಳು ಹಾಗೂ ಫ್ರೆಶ್ ಫ್ರೋಜನ್ ಪ್ಲಾಸ್ಮಾ ಸೇರಿದಂತೆ ವಿವಿಧ ಘಟಕಗಳು ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ವಿಶೇಷವಾಗಿ ಹೆರಿಗೆ ಸಂದರ್ಭದಲ್ಲಿ ಅಧಿಕ ರಕ್ತಸ್ರಾವ, ರಸ್ತೆ ಅಪಘಾತಗಳು ಹಾಗೂ ತುರ್ತು ಶಸ್ತ್ರಚಿಕಿತ್ಸೆಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಇಂತಹ ಸಂದರ್ಭಗಳಲ್ಲಿ ರಕ್ತದ ಲಭ್ಯತೆಯೇ ರೋಗಿಯ ಜೀವ ಉಳಿಸುವಲ್ಲಿ ನಿರ್ಣಾಯಕವಾಗುತ್ತದೆ ಎಂದು ವಿವರಿಸಿದರು.
ಹಿಂದೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ತುರ್ತು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಿರಂತರವಾಗಿ ರಕ್ತ ಪೂರೈಸಬೇಕಾದ ಪರಿಸ್ಥಿತಿ ಎದುರಾಗಿದ್ದನ್ನು ಸ್ಮರಿಸಿದ ಅವರು, ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.
ರಾಯಚೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ರಕ್ತ ಮತ್ತು ಅದರ ಘಟಕಗಳ ಲಭ್ಯತೆಯನ್ನು ಹೆಚ್ಚಿಸುವ ಅಗತ್ಯವಿದೆ. ರೋಟರಿ ಸಂಸ್ಥೆಯಂತಹ ಸೇವಾ ಸಂಘಟನೆಗಳು ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ. ಪತ್ರಕರ್ತರು ತಮ್ಮ ವೃತ್ತಿ ಜವಾಬ್ದಾರಿಯ ಜೊತೆಗೆ ಇಂತಹ ಮಾನವೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರೋಟರಿ ಜಿಲ್ಲಾ ಗವರ್ನರ್ ತ್ರಿವಿಕ್ರಮ್ ಜೋಶಿ ಮಾತನಾಡಿ, ರಕ್ತದ ಬೇಡಿಕೆಗೆ ಅನುಗುಣವಾಗಿ ದಾನಿಗಳ ಸಂಖ್ಯೆ ಹೆಚ್ಚಾಗಬೇಕಿದೆ. ಕೆಲವೊಮ್ಮೆ ಸ್ಥಳೀಯವಾಗಿ ಅಗತ್ಯ ಪ್ರಮಾಣದ ರಕ್ತ ಲಭ್ಯವಾಗದ ಕಾರಣ ಹೊಸಪೇಟೆ ಹಾಗೂ ಬೆಂಗಳೂರಿನಂತಹ ನಗರಗಳಿಂದ ರಕ್ತ ಸಂಗ್ರಹಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಸಾರ್ವಜನಿಕರಲ್ಲಿ ರಕ್ತದಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ರಕ್ತದಾನ ಮಾಡಲು ಜನರು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು. ಒಬ್ಬ ವ್ಯಕ್ತಿಯ ರಕ್ತದಾನದಿಂದ ವಿವಿಧ ರಕ್ತಘಟಕಗಳ ಮೂಲಕ ಒಂದಕ್ಕಿಂತ ಹೆಚ್ಚು ರೋಗಿಗಳಿಗೆ ನೆರವಾಗುವ ಅವಕಾಶವಿದೆ. ರಿಪೋರ್ಟರ್ಸ್ ಗಿಲ್ಡ್ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಇಂತಹ ಉಪಯುಕ್ತ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಮಾತನಾಡಿ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವುದು ಹೆಮ್ಮೆಯ ಸಂಗತಿ. ಈ ಸುದೀರ್ಘ ಅವಧಿಯಲ್ಲಿ ಪತ್ರಕರ್ತರ ಹಿತಾಸಕ್ತಿಯ ಜೊತೆಗೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಾ ಬಂದಿದೆ. ಬೆಳ್ಳಿ ಮಹೋತ್ಸವವನ್ನು ಕೇವಲ ಮನರಂಜನೆ ಹಾಗೂ ಅದ್ಧೂರಿ ಸಮಾರಂಭಗಳಿಗೆ ಸೀಮಿತಗೊಳಿಸದೆ, ಜನಸಾಮಾನ್ಯರಿಗೆ ಪ್ರಯೋಜನವಾಗುವ ಸೇವಾ ಚಟುವಟಿಕೆಗಳ ಮೂಲಕ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ರಿಪೋರ್ಟರ್ಸ್ ಗಿಲ್ಡ್ ಕೇವಲ ಪತ್ರಕರ್ತರಿಗೆ ಸಂಬಂಧಿಸಿದ ಸಂಘಟನೆಯಲ್ಲ, ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸಂಸ್ಥೆಯಾಗಿದೆ. ಆದ್ದರಿಂದ ಬೆಳ್ಳಿ ಮಹೋತ್ಸವದ ಯಶಸ್ಸಿಗೆ ಜಿಲ್ಲೆಯ ವಿವಿಧ ಸಂಘಟನೆಗಳು, ಗಣ್ಯರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಅಕ್ಟೋಬರ್ 30ರಂದು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಮುಖ್ಯ ಸಮಾರಂಭ ಆಯೋಜಿಸಲಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಂಡು ಬೆಳ್ಳಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ರಕ್ತದಾನದಲ್ಲಿ ಪತ್ರಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ: ಶಿಬಿರದಲ್ಲಿ ತುಂಗ ಬಿಂಬ ಕನ್ನಡ ದಿನಪತ್ರಿಕೆಯ ಸಂಪಾದಕ ಗುರುರಾಜ ಕೆ., ರಾಯಚೂರು ಧ್ವನಿ ಪತ್ರಿಕೆಯ ಸಂಪಾದಕ ಲಕ್ಷ್ಮಣ ಕಪಗಲ್, ರಮೇಶ್ ಗೌಡ, ಎಚ್ಚರಿಕೆ ಗಂಟೆ ಪತ್ರಿಕೆಯ ಸಂಪಾದಕ ರವಿದಾಸ್ ಸೇರಿದಂತೆ ವಿವಿಧ ಪತ್ರಿಕೆಗಳ ಸಂಪಾದಕರು, ವರದಿಗಾರರು ಹಾಗೂ ಪತ್ರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಅನೇಕರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು. ವೃತ್ತಿಯ ಮೂಲಕ ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತರುವ ಪತ್ರಕರ್ತರು ರಕ್ತದಾನದಲ್ಲಿಯೂ ಭಾಗವಹಿಸುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆದರು.
ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ರಾಮರಾವ್ ಗಣೇಕಲ್, ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದನಗೌಡ ಕುಕನೂರು, ಸಂಪಾದಕರ ಸಂಘದ ಅಧ್ಯಕ್ಷ ಚನ್ನಬಸವ ಬಾಗಲವಾಡ, ವೆಂಕಟೇಶ ಹೂಗಾರ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.



