ರಾಯಚೂರು, ಅ.9: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ನೇತಾಜಿ ನಗರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಜನಸಾಮಾನ್ಯರ ಮತದಾನದ ಹಕ್ಕಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ಆದರೆ ಎಸ್ಐಆರ್ ಪ್ರಕ್ರಿಯೆಯ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಆತಂಕ ಎದುರಾಗಿದೆ. ವಿಶೇಷವಾಗಿ ಬಡವರು, ಕಾರ್ಮಿಕರು, ಹಿಂದುಳಿದ ವರ್ಗಗಳು ಹಾಗೂ ಗ್ರಾಮೀಣ ಪ್ರದೇಶದ ಜನರು ಈ ಪ್ರಕ್ರಿಯೆಯಿಂದ ತೊಂದರೆ ಅನುಭವಿಸುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷದ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರವಾಗಿ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಆದರೆ ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಭಾವಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಅನುಮಾನ ಮೂಡಿದೆ ಎಂದು ಆರೋಪಿಸಿದ ಅವರು, ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವದ ಮೂಲಾಧಾರವೇ ಜನರ ಮತದಾನದ ಹಕ್ಕು. ಆ ಹಕ್ಕನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಸಂವಿಧಾನದ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಪಕ್ಷದ ಕಾರ್ಯಕರ್ತರು ನಿರಂತರ ಹೋರಾಟ ನಡೆಸಲಿದ್ದಾರೆ. ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಭಾರತದ ಸಂವಿಧಾನವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಸಮಾನ ಮತದಾನದ ಹಕ್ಕನ್ನು ಕಲ್ಪಿಸಿದೆ. ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳುವುದು ಚುನಾವಣಾ ಆಯೋಗದ ಪ್ರಮುಖ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅರ್ಹ ಮತದಾರ ತನ್ನ ಹಕ್ಕಿನಿಂದ ವಂಚಿತನಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ನೆಪದಲ್ಲಿ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗಬಾರದು. ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವು ಜನರ ಆತಂಕವನ್ನು ನಿವಾರಿಸಬೇಕು. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಎಸ್ಐಆರ್ ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಮಾತನಾಡಿ, ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಮತದಾನದ ಹಕ್ಕನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಚುನಾವಣಾ ಪ್ರಕ್ರಿಯೆ ನ್ಯಾಯಸಮ್ಮತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಸಾಮಾನ್ಯ ಜನರಿಗೆ ಅನಗತ್ಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕೆಂದು ಕರೆ ನೀಡಿದರು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸುವಂತೆ ಆಗ್ರಹಿಸಿದರು. ಚುನಾವಣಾ ಆಯೋಗವು ಸಂವಿಧಾನಬದ್ಧವಾಗಿ, ರಾಜಕೀಯ ಪ್ರಭಾವದಿಂದ ಮುಕ್ತವಾಗಿ ಕಾರ್ಯನಿರ್ವಹಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ ಅಂಗಡಿ, ಅಮರೇಗೌಡ ಅಂಚಿನಾಳ, ಜಯಣ್ಣ, ಶಾಲಾಮ್, ಶ್ರೀನಿವಾಸ್ ರೆಡ್ಡಿ, ಪವನ್ ಕುಮಾರ್, ಡಾ. ರಜಾಕ್ ಉಸ್ತಾದ್, ನರಸಿಂಹಲು ಮಡಗಿರಿ, ಶ್ರೀದೇವಿ ನಾಯಕ, ಪ್ರತಿಭಾ ರೆಡ್ಡಿ, ನಿರ್ಮಲ ಬೆಣ್ಣೆ, ಶಶಿಕಲಾ, ಸುರೇಖಾ, ಮರಿಸ್ವಾಮಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.



