ಸಿಂಧನೂರು: ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಮಾದರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಿಶ್ವವಿದ್ಯಾಲಯದ ಪರೀಕ್ಷಾ ಫಲಿತಾಂಶ ಹಾಗೂ ಅಂಕಪಟ್ಟಿ ಪ್ರಕಟಣೆಯಲ್ಲಿ ವಿಳಂಬವಾಗುತ್ತಿದೆ. ಫೆಬ್ರುವರಿ ತಿಂಗಳಲ್ಲೇ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಇದುವರೆಗೆ ಅಂಕಪಟ್ಟಿಗಳು ಲಭ್ಯವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಎನ್‌ಎಡಿ ಹಾಗೂ ಡಿಜಿಲಾಕರ್‌ಗೆ ಅಪ್‌ಲೋಡ್ ಮಾಡದಿರುವುದರಿಂದ ಮುಂದಿನ ಪದವಿ ಪ್ರವೇಶ, ವಿಶೇಷವಾಗಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆಯಲ್ಲಿ ತೊಂದರೆ ಉಂಟಾಗುವ ಆತಂಕವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಸದಿರುವುದರಿಂದ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಅಗತ್ಯ ಪ್ರಮಾಣಪತ್ರಗಳು ಸಕಾಲದಲ್ಲಿ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಫಲಿತಾಂಶ ಹಾಗೂ ಅಂಕಪಟ್ಟಿಗಳನ್ನು ತಕ್ಷಣ ಪ್ರಕಟಿಸಬೇಕು, ಎನ್‌ಎಡಿ ಮತ್ತು ಡಿಜಿಲಾಕರ್‌ಗೆ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು ಹಾಗೂ ಬಾಕಿ ಇರುವ ಘಟಿಕೋತ್ಸವಗಳನ್ನು ಶೀಘ್ರ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಗರದ ಆಕ್ಸ್‌ಫರ್ಡ್ ಕಾಲೇಜು, ಎಕ್ಸಲೆಂಟ್ ಕಾಲೇಜು ಹಾಗೂ ಎಲ್‌ಬಿಕೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.