ರಾಯಚೂರು, ಅ.10: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ತಡೆಯಲು ಕೇಂದ್ರ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಾಯಚೂರು ಜಿಲ್ಲಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ್, ಅಕ್ಟೋಬರ್ 10ರಂದು ಎಡಪಂಥೀಯ ಹಾಗೂ ಪ್ರಜಾಸತ್ತಾತ್ಮಕ ಸಂಘಟನೆಗಳ ನೇತೃತ್ವದಲ್ಲಿ ನವದೆಹಲಿಯ ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ನೀತಿ ಮತ್ತು ನಿರ್ಧಾರಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಬಳಸಿಕೊಂಡು ಪ್ರಜಾಸತ್ತಾತ್ಮಕ ಚಳವಳಿಗಳನ್ನು ದಮನಿಸಲು ಮುಂದಾಗಿರುವುದು ಖಂಡನೀಯ. ಇಂತಹ ಕ್ರಮಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಅವರು ತಿಳಿಸಿದ್ದಾರೆ.
ಪ್ರತಿಭಟನಾಕಾರರು ರಾಷ್ಟ್ರ ರಾಜಧಾನಿಗೆ ಆಗಮಿಸದಂತೆ ರೈಲು ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ. ದೆಹಲಿಯಲ್ಲಿ ಮೆಟ್ರೋ ಸೇವೆಯನ್ನು 12 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇಂಟರ್ನೆಟ್ ಹಾಗೂ ಸಂಪರ್ಕ ಜಾಲಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಂತರ್ ಮಂತರ್ ಕಡೆಗೆ ಪ್ರತಿಭಟನಾಕಾರರು ತೆರಳದಂತೆ ನಗರದ ವಿವಿಧೆಡೆ ಬ್ಯಾರಿಕೇಡ್ಗಳನ್ನು ಅಳವಡಿಸಿ ತಪಾಸಣೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇದಲ್ಲದೆ, ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸೇರಿದಂತೆ ವಿವಿಧ ಸಂಘಟನೆಗಳ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿ ಕಾರ್ಯಕರ್ತರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಸಿಪಿಐ(ಎಂ) ಸಂಸದರು ಹಾಗೂ ಮುಖಂಡರು ತಂಗಿದ್ದ ಸ್ಥಳಗಳಿಗೆ ತಡರಾತ್ರಿ ಪೊಲೀಸರು ತೆರಳಿ ಬೆದರಿಕೆ ಹಾಕಲು ಪ್ರಯತ್ನಿಸಿದ್ದಾರೆ. ಇತರ ಸಂಘಟನೆಗಳ ಮುಖಂಡರ ಮೇಲೆಯೂ ಒತ್ತಡ ಹೇರಲಾಗಿದೆ ಎಂದು ದೂರಿದ್ದಾರೆ.
ಒಂದೆಡೆ ಪ್ರಜಾಸತ್ತಾತ್ಮಕ ಸಂಘಟನೆಗಳ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ವ್ಯಾಪಕ ನಿರ್ಬಂಧಗಳನ್ನು ವಿಧಿಸಲಾಗುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನೆ ವಿರೋಧಿಸುವ ಹಿಂದುತ್ವಪರ ಸಂಘಟನೆಗಳಿಗೆ ಮೆರವಣಿಗೆ ನಡೆಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ರೀತಿಯ ತಾರತಮ್ಯದ ಕ್ರಮಗಳು ರಾಜಧಾನಿಯಲ್ಲಿ ಸಂಘರ್ಷದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್ಐಆರ್ ಪ್ರಕ್ರಿಯೆಯ ಕುರಿತು ಹಲವು ಅನುಮಾನಗಳು ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಜನರ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಪ್ರತಿಭಟನೆಗಳನ್ನು ನಿರ್ಬಂಧಿಸುವುದು ಸರಿಯಲ್ಲ. ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವುದು ಸರ್ಕಾರ ಹಾಗೂ ಚುನಾವಣಾ ಆಯೋಗದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ನಿಯೋಗ ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ನಾಗರಿಕರ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ರಾಷ್ಟ್ರಪತಿಗಳು ಮತ್ತು ಸರ್ವೋಚ್ಚ ನ್ಯಾಯಾಲಯ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರತಿಭಟನಾಕಾರರ ಮೇಲೆ ವಿಧಿಸಿರುವ ಎಲ್ಲ ನಿರ್ಬಂಧಗಳನ್ನು ತಕ್ಷಣ ತೆರವುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ವಿವಾದಿತ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೆ.ಜಿ. ವೀರೇಶ್ ಒತ್ತಾಯಿಸಿದ್ದಾರೆ.



