ರಾಯಚೂರು: ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯತೆ ಪೂರೈಸುವುದರ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಗಾಣೇಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

ಗಾಣೇಕಲ್ ಜಲಾಶಯದಿಂದ 99ಎ, 100, 102 ಹಾಗೂ 102ಎ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರು ನಗರದ ಕೆಳಭಾಗದ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವುದರೊಂದಿಗೆ ಕಾಲುವೆ ವ್ಯಾಪ್ತಿಯ ರೈತರ ಬೆಳೆಗಳಿಗೂ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನೀರು ಪೂರೈಕೆ ಹಾಗೂ ಕಾಲುವೆಗಳ ನಿರ್ವಹಣೆ ಕುರಿತು ಚರ್ಚಿಸಿದ ಶಾಸಕರು, ಜಲಾಶಯದಿಂದ ಬಿಡುಗಡೆಯಾಗುವ ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು. ನೀರಿನ ಹರಿವಿನ ಮೇಲೆ ನಿರಂತರ ನಿಗಾ ಇರಿಸುವುದರ ಜೊತೆಗೆ ಅನಗತ್ಯ ಪೋಲು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ವಿತರಣೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ರೈತರು ಬೆಳೆದಿರುವ ಬೆಳೆಗಳಿಗೆ ಅಗತ್ಯವಿರುವ ನೀರು ಲಭ್ಯವಾಗುವಂತೆ ಕಾಲುವೆಗಳಲ್ಲಿ ನೀರಿನ ಹರಿವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆ ಎದುರಾಗದಂತೆ ನೋಡಿಕೊಳ್ಳುವುದು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಾವರಿ ಸೌಲಭ್ಯ ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಪಕವಾಗಿ ಬಳಸಿಕೊಂಡು ಜನರು ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

ಈ ಸಂದರ್ಭದಲ್ಲಿ ಶಿವಪ್ಪ ನಾಯಕ, ಚೆನ್ನಬಸವ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಉಪಸ್ಥಿತರಿದ್ದರು.