ಹಟ್ಟಿ ಚಿನ್ನದ ಗಣಿ: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಗುರುಗುಂಟಾ ಹೋಬಳಿ ವ್ಯಾಪ್ತಿಯ 7ಬಿ, 7ಎ ಹಾಗೂ ಡಿಐ–8 ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಪರಿಣಾಮ ಭತ್ತದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದ ತಾಲೂಕು ಅಧ್ಯಕ್ಷ ದುರ್ಗಾಪ್ರಸಾದ್ ನೇತೃತ್ವದಲ್ಲಿ ರೈತರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗುರುಗುಂಟಾ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿ ಭತ್ತದ ನಾಟಿ ಮಾಡಿದ್ದು, ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಕೂಲಿ ಸೇರಿದಂತೆ ಸಾಕಷ್ಟು ಹಣ ಹೂಡಿಕೆ ಮಾಡಿದ್ದಾರೆ. ಆದರೆ ಬೆಳೆಗಳಿಗೆ ಅತ್ಯಗತ್ಯವಾಗಿ ಬೇಕಾದ ಸಂದರ್ಭದಲ್ಲಿ ಕಾಲುವೆಗಳಲ್ಲಿ ನೀರು ಹರಿಯದ ಕಾರಣ ಭತ್ತದ ಗದ್ದೆಗಳು ಒಣಗುತ್ತಿವೆ. ಇದರಿಂದ ರೈತರು ಬೆಳೆ ನಷ್ಟದ ಆತಂಕ ಎದುರಿಸುತ್ತಿದ್ದಾರೆ ಎಂದು ದೂರಿದರು.

ಕಾಲುವೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಗೇಟ್‌ಗಳನ್ನು ಅಳವಡಿಸಿ ಸಮರ್ಪಕವಾಗಿ ನೀರು ವಿತರಿಸುವ ವ್ಯವಸ್ಥೆ ಮಾಡಿಲ್ಲ. ನೀರಿನ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುವ ಬದಲು ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ರೈತರು ಆರೋಪಿಸಿದರು.

ಈ ಕುರಿತು ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ದುರ್ಗಾಪ್ರಸಾದ್, ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ಬಡ ರೈತರು ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಸಾಲ ಮಾಡಿ ಸಾವಿರಾರು ರೂಪಾಯಿ ಬಂಡವಾಳ ಹೂಡಿರುವ ರೈತರಿಗೆ ನೀರಿನ ಕೊರತೆಯಿಂದ ಕೈಗೆ ಬಂದ ಬೆಳೆ ನಾಶವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

"ಗದ್ದೆಗಳಿಗೆ ನೀರು ಕೊಡಿ, ಇಲ್ಲವೇ ವಿಷ ಕೊಡಿ" ಎಂದು ರೈತರು ತಮ್ಮ ಅಸಹಾಯಕತೆ ಹಾಗೂ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ನೀರಾವರಿ ಇಲಾಖೆ ಕೂಡಲೇ ಸಮಸ್ಯೆಯ ಗಂಭೀರತೆಯನ್ನು ಅರಿತು ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಸಂಬಂಧಪಟ್ಟ ಮೇಲಾಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಕಾಲುವೆಗಳಲ್ಲಿ ನೀರು ಹರಿಯದಿರುವ ಕಾರಣ ಪತ್ತೆಹಚ್ಚಬೇಕು. ಅಗತ್ಯವಿರುವ ಕಡೆ ಗೇಟ್‌ಗಳನ್ನು ಸರಿಪಡಿಸಿ, ಎಲ್ಲ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತರನ್ನು ಸಂಘಟಿಸಿ ಸಂಬಂಧಪಟ್ಟ ಇಲಾಖೆಯ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದುರ್ಗಾಪ್ರಸಾದ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ದುರ್ಗಾಪ್ರಸಾದ್, ಲಕ್ಷ್ಮೀನಾರಾಯಣ, ಮಲ್ಲು, ಆದಪ್ಪ, ಶಾಹಿದ್ ಅಲಿ, ಬಸವ, ಆದಪ್ಪ ಮೀಸೆ, ಕಮಲ್ ಸಾಬ್ ಸೇರಿದಂತೆ ಇತರ ರೈತರು ಉಪಸ್ಥಿತರಿದ್ದರು.