ರಾಯಚೂರು, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ನವದೆಹಲಿಯಲ್ಲಿ ಶನಿವಾರ ನಡೆದ ಪ್ರತಿಭಟನೆ ವೇಳೆ ಬಂಧಿಸಲಾದ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಡ ಪ್ರಜಾಸತ್ತಾತ್ಮಕ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ತೀನ್ ಖಂದಿಲ್ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು.
ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ, ಮಾರೆಪ್ಪ ಹರವಿ, ಹಸಿಮುದ್ದೀನ್, ಖಾಜಾ ಅಸ್ಲಂ, ಮಹೇಶ ಮಲ್ಲನಗೌಡ ಹಾಗೂ ಅಕ್ಬರ್ ನಾಂಗುಡಿ ಮಾತನಾಡಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು.
ಪ್ರತಿಭಟನೆಯ ವೇಳೆ ಬಂಧಿಸಲಾದ ಎಲ್ಲ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಡಿ.ಎಸ್. ಶರಣಬಸವ, ಆಂಜನೇಯ ಕುರುಬದೊಡ್ಡಿ, ಅಶ್ರಫ್ ಅಲಿ, ಜಿಲಾನಿ ಪಾಷಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



