ರಾಯಚೂರು, ಅ.11: ಮುಂಬರುವ ವಿವಿಧ ಚುನಾವಣೆಗಳ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಸಭೆಯನ್ನು ಭಾನುವಾರ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ನಡೆಸಲಾಯಿತು. ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣಾ ಸಿದ್ಧತೆ ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ದದ್ದಲ್, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಬಿಎಲ್‌ಎ ಸದಸ್ಯರು ಎಚ್ಚರಿಕೆ ವಹಿಸಬೇಕು. ಮತದಾರರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡುವುದರ ಜೊತೆಗೆ ಮತದಾರರ ಪಟ್ಟಿ ಪರಿಶೀಲನೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಮುಂಬರುವ ಶಿಕ್ಷಕರ ಹಾಗೂ ಪದವೀಧರರ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆಗಳ ಕುರಿತು ಚರ್ಚಿಸಿದ ಅವರು, ಚುನಾವಣಾ ಕಾರ್ಯಚಟುವಟಿಕೆಗಳನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಮನ್ವಯದಿಂದ ನಿರ್ವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕ್ಷೇತ್ರದ ಪ್ರತಿಯೊಂದು ಗ್ರಾಮ, ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಜನರ ಸಮಸ್ಯೆಗಳನ್ನು ಆಲಿಸಿ, ಜನಸಂಪರ್ಕವನ್ನು ವಿಸ್ತರಿಸುವ ಮೂಲಕ ಪಕ್ಷದ ಸಂಘಟನೆಯನ್ನು ಸಕ್ರಿಯಗೊಳಿಸಬೇಕು ಎಂದು ಕರೆ ನೀಡಿದರು.

ಚುನಾವಣಾ ಸಿದ್ಧತೆಗಳನ್ನು ಈಗಿನಿಂದಲೇ ವ್ಯವಸ್ಥಿತವಾಗಿ ಕೈಗೊಂಡು ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕು. ಪಕ್ಷದ ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಬಿಎಲ್‌ಎ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.