ಕೊಪ್ಪಳ: ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಹಸ್ತ ಮಳೆಯಾಗಿದ್ದು, ಭೂಮಿಯಲ್ಲಿ ತೇವಾಂಶದ ಕೊರತೆಯಿದ್ದರೂ ರೈತರು ಹಿಂಗಾರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಿಲ್ಲದ ಕಾರಣ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಎರಡು ದಿನಗಳೊಳಗೆ ಅಗತ್ಯ ಬೀಜ ಮತ್ತು ಗೊಬ್ಬರ ಪೂರೈಸಬೇಕು ಎಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಅತಿವೃಷ್ಟಿಯಿಂದ ರೈತರು ಬೆಳೆ ನಷ್ಟ ಅನುಭವಿಸಿದ್ದರು. ಈ ವರ್ಷ ಮುಂಗಾರು ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹಾಳಾಗಿವೆ. ಸತತ ಸಂಕಷ್ಟಕ್ಕೆ ಸಿಲುಕಿರುವ ರೈತರು ಸಾಲ ಮಾಡಿ ಹಿಂಗಾರು ಬಿತ್ತನೆ ಆರಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಗತ್ಯ ಕೃಷಿ ಪರಿಕರಗಳನ್ನು ಒದಗಿಸದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಕುಸುಬೆ, ಅಗಸೆ ಸೇರಿದಂತೆ ಹಿಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ಬೀಜೋಪಚಾರ ಔಷಧಿಗಳು ಹಾಗೂ ರಸಗೊಬ್ಬರಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಬೇಕು. ರೈತರಿಗೆ ಸಹಾಯಧನದ ದರದಲ್ಲಿ ವಿತರಿಸುವುದರ ಜೊತೆಗೆ, ಈ ಬಾರಿ ಹೆಚ್ಚಿನ ಪ್ರದೇಶದಲ್ಲಿ ಹಿಂಗಾರು ಬಿತ್ತನೆ ನಡೆಯುತ್ತಿರುವುದರಿಂದ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಪ್ರಮಾಣದ ಬೀಜ ಒದಗಿಸಬೇಕು ಎಂದು ಒತ್ತಾಯಿಸಿದರು.
ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರೈತರು ಹಿಂಗಾರು ಬೆಳೆಯನ್ನೇ ನಂಬಿಕೊಂಡಿದ್ದಾರೆ. ಭೂಮಿಯಲ್ಲಿ ಸಾಕಷ್ಟು ತೇವಾಂಶ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಮಳೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಬಿತ್ತನೆ ನಡೆಸುತ್ತಿದ್ದಾರೆ. ಹೀಗಾಗಿ ರೈತರಿಗೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಮುಂದಿನ ಒಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಜಿಲ್ಲೆಯ ತಾಲೂಕುಗಳನ್ನು ಹಿಂಗಾರು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲವನ್ನು ಬಡ್ಡಿ ಸಮೇತ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಸಂಘಟನೆಯ ವತಿಯಿಂದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅಂದಪ್ಪ ಕೋಳೂರು ಎಚ್ಚರಿಸಿದರು.



